ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ರಚಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಒಟ್ಟು 75 ಸದಸ್ಯರ ಬಲದ ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ರಚಿಸಲಾಗಿದೆ.
ಬೆಂಗಳೂರನ್ನು ಐದು ನಗರ ಪಾಲಿಕೆಗಳಾಗಿ ವಿಭಜಿಸುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ರಚನೆ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಸಿಎಂ ಸಿದ್ದರಾಮಯ್ಯ ಅವರು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷರಾಗಿದ್ದು, ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಸಿಎಂ ಡಿ.ಕೆ. ಶಿವಕುಮಾರ್ ಉಪಾಧ್ಯಕ್ಷರಾಗಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿ 73 ಮಂದಿಯನ್ನು ಪದನಿಮಿತ್ತ ಸದಸ್ಯರಾಗಿ ನೇಮಕ ಮಾಡಲಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪದನಿಮಿತ್ತ ಸದಸ್ಯರಾಗಿ ಬೆಂಗಳೂರಿನ ಮೂವರು ಸಂಸದರು, ಬೆಂಗಳೂರು ವ್ಯಾಪ್ತಿಯ ಶಾಸಕರುಗಳನ್ನು ನೇಮಿಸಲಾಗಿದೆ. ಕರ್ನಾಟಕದಿಂದ ಆಯ್ಕೆಯಾಗಿರುವ ಐವರನ್ನು ರಾಜ್ಯಸಭಾ ಸದಸ್ಯರನ್ನು ಪದನಿಮಿತ್ತ ಸದಸ್ಯರನ್ನಾಗಿ ನೇಮಿಸಲಾಗಿದೆ. 11 ಮಂದಿ ವಿಧಾನ ಪರಿಷತ್ ಸದಸ್ಯರನ್ನೂ ಪದನಿಮಿತ್ತ ಸದಸ್ಯರನ್ನಾಗಿ ನೇಮಿಸಲಾಗಿದೆ. ವಿಧಾನ ಪರಿಷತ್ ಸದಸ್ಯರಾದ ಯತೀಂದ್ರ ಸಿದ್ದರಾಮಯ್ಯ ಕೂಡ ಪದನಿಮಿತ್ತ ಸದಸ್ಯರಾಗಿದ್ದಾರೆ.
ಉಳಿದಂತೆ ಐದು ನಗರ ಪಾಲಿಕೆಗಳಾದ ಬೆಂಗಳೂರು ಕೇಂದ್ರ, ಬೆಂಗಳೂರು ಪೂರ್ವ, ಬೆಂಗಳೂರು ಪಶ್ಚಿಮ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ನಗರ ಪಾಲಿಕೆಗಳ ಮೇಯರುಗಳು ಹಾಗೂ ಆಯುಕ್ತರುಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪದನಿಮಿತ್ತ ಸದಸ್ಯರನ್ನಾಗಿಸಲಾಗಿದೆ. ಇನ್ನು ಬಿಡಿಎ ಆಯುಕ್ತರು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರು, ನಗರ ಪೊಲೀಸ್ ಆಯುಕ್ತರು, ಬೆಂಗಳೂರು ಮೆಟ್ರೋ ರೈಲು ನಿಗಮ ಎಂಡಿ, ಬಿಎಂಆರ್ ಸಿಎಲ್ ಮಹಾನಗರ ಆಯುಕ್ತರು, ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರದ ಸಿಇಒರನ್ನು ಪದನಿಮಿತ್ತ ಸದಸ್ಯರನ್ನಾಗಿ ನೇಮಿಸಲಾಗಿದೆ.