ಧಾರವಾಡ: ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಪಡೆಯುತ್ತಿದ್ದ ಯುವತಿಯೋರ್ವಳು ಡೆತ್ ನೋಟ್ ಬರೆದಿಟ್ಟು, ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಲ್ಲಿನ ಸಪ್ತಾಪುರದಲ್ಲಿ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಯರಗಟ್ಟಿ ಗ್ರಾಮದ ವಿದ್ಯಾರ್ಥಿನಿ ಗೀತಾ ಹೆಗ್ಗನ್ನವರ (22) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿಯಾಗಿದ್ದು, ಸಪ್ತಾಪುರದಲ್ಲಿರುವ ಅಶ್ವಿನಿ ಪಿಜಿಯಲ್ಲಿ ವಾಸವಾಗಿದ್ದರು. ಕೋಚಿಂಗ್ ಸೆಂಟರ್ನಲ್ಲಿ ಕಳೆದ ಎರಡು ತಿಂಗಳಿಂದ ತರಬೇತಿ ಪಡೆಯುತ್ತಿದ್ದರು. ಒಂದೇ ರೂಮಿನಲ್ಲಿ ಮೂವರು ವಿದ್ಯಾರ್ಥಿನಿಯರು ತಂಗಿದ್ದರು ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಉಪನಗರ ಪೋಲಿಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.