ಬೆಂಗಳೂರು: ನಟ ವಿಷ್ಣುವರ್ಧನ್ ಹಾಗೂ ನಟಿ ಬಿ.ಸರೋಜಾದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ಬದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ನಟ ವಿಷ್ಣುವರ್ಧನ್ಗೆ ಮರಣೋತ್ತರ ಕರ್ನಾಟಕ ರತ್ನ ನೀಡುವಂತೆ ಭಾರತಿ ವಿಷ್ಣುವರ್ಧನ್, ಅನಿರುದ್ದ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕರ್ನಾಟಕ ರತ್ನ ನೀಡುವಂತೆ ಒತ್ತಾಯಿಸಿದ್ದರು. ಜೊತೆಗೆ ವಿಷ್ಣು ಅಭಿಮಾನಿಗಳು ಈ ಸಂಬಂಧ ಸರ್ಕಾರಕ್ಕೆ ಒತ್ತಾಯಿಸುತ್ತಿದ್ದರು.
ಇದೀಗ ರಾಜ್ಯ ಸರ್ಕಾರ ನಟ ವಿಷ್ಣುವರ್ಧನ್ಗೆ ಮರಣೋತ್ತರ ಕರ್ನಾಟಕ ರತ್ನ ನೀಡಲು ತೀರ್ಮಾನಿಸಿದೆ. ಇದರ ಜೊತೆಗೆ ನಟಿ ಬಿ.ಸರೋಜಾದೇವಿ ಅವರಿಗೂ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು. ಪ್ರಶಸ್ತಿ ಸಮಾರಂಭದ ದಿನಾಂಕವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ತೀರ್ಮಾನಿಸಲಿದ್ದಾರೆ ಎಂದು ಇದೇ ವೇಳೆ, ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು.
ಕುವೆಂಪುಗೆ ಭಾರತ ರತ್ನ ನೀಡಲು ಶಿಫಾರಸು: ರಾಷ್ಟ್ರಕವಿ ಕುವೆಂಪು ಅವರಿಗೆ ಭಾರತ ರತ್ನಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು. ಜ್ಞಾನಪೀಠ ಪ್ರಶಸ್ತಿ ವಿಜೇತ ರಾಷ್ಟ್ರಕವಿ ಕುವೆಂಪುಗೆ ಭಾರತ ರತ್ನ ನೀಡುವಂತೆ ಹಲವು ವರ್ಷಗಳಿಂದ ಬೇಡಿಕೆ ಇತ್ತು. ಇದೀಗ ರಾಜ್ಯ ಸರ್ಕಾರ ಕುವೆಂಪುಗೆ ಭಾರತರತ್ನ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ತೀರ್ಮಾನಿಸಿದೆ.