ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ಅಕ್ರಮವಾಗಿ ನಿವೇಶನ ಪಡೆದ ಆರೋಪ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೀಡಿದ್ದ ಅನುಮತಿಯನ್ನು ಎತ್ತಿ ಹಿಡಿದಿದ್ದ ಏಕ ಸದಸ್ಯ ಪೀಠದ ಕ್ರಮವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಇಂದು ಮುಂದೂಡಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಆಕ್ಷೇಪಾರ್ಹ ಜಮೀನಿನ ಮೂಲ ಮಾಲೀಕ ಜೆ.ದೇವರಾಜು ಎಂಬವರು ಸಲ್ಲಿಸಿರುವ ಮೇಲ್ಮನವಿಗಳನ್ನು ನ್ಯಾಯಮೂರ್ತಿ ಅನು ಶಿವರಾಮನ್ ಮತ್ತು ಕೆ. ರಾಜೇಶ್ ರೈ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹಾಜರಾಗಿದ್ದ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ, ಮೇಲ್ಮನವಿಗಳನ್ನು ಅಂತಿಮವಾಗಿ ವಿಚಾರಣೆ ನಡೆಸಬೇಕಿದೆ ಎಂದರು.
ಇದಕ್ಕೆ ಮುಡಾ ಪರ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ಅವರು ನವೆಂಬರ್ ಎರಡನೇ ವಾರದಲ್ಲಿ ವಿಚಾರಣೆ ನಡೆಸುವಂತೆ ಕೋರಿದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಇಂದು ವಿಚಾರಣೆಗೆ ಪಟ್ಟಿಯಾಗಿದ್ದ ಸಿದ್ದರಾಮಯ್ಯ ಸಲ್ಲಿಸಿರುವ ಒಂದು ಮತ್ತು ಜೆ ದೇವರಾಜು ಸಲ್ಲಿಸಿರುವ ಎರಡು ಮೇಲ್ಮನವಿಗಳು ವಿಚಾರಣೆಯನ್ನು ಮುಂದೂಡಿತು.