ಬೆಳಗಾವಿ: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ಕು ವರ್ಷದ ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮಾಲದಿನ್ನಿ ಕ್ರಾಸ್ ಬಳಿ ನಡೆದಿದೆ.
ಪುಣೆಯಿಂದ ಸವದತ್ತಿ ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕುಟುಂಬಕ್ಕೆ ಮಾಲದಿನ್ನಿ ಕ್ರಾಸ್ ಬಳಿ ಅಪಘಾತದ ರೂಪದಲ್ಲಿ ಸಾವು ಎದುರಾಗಿದೆ. ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಈ ಭೀಕರ ಅಪಘಾತದಲ್ಲಿ ಓಂಕಾರ ಮಾಂಡ್ರಿ (26), ರೇಷ್ಮಾ ಶ್ರೀಕಾಂತ ಮಾಂಡ್ರಿ (32) ಹಾಗೂ ದೇವಾಂಶ ಶ್ರೀಕಾಂತ ಮಾಂಡ್ರಿ (4) ಮೃತಪಟ್ಟಿದ್ದಾರೆ. ಒಂದೇ ಕುಟುಂಬದ ಮೂವರು ಜೀವ ಕಳೆದುಕೊಂಡಿರುವುದು ಕುಟುಂಬಸ್ಥರು ಹಾಗೂ ಸಂಬಂಧಿಕರಲ್ಲಿ ಆಕ್ರಂದನ ಮೂಡಿಸಿದೆ.
ಅಪಘಾತದಲ್ಲಿ ಶ್ರೀಕಾಂತ, ವಂದನಾ ಹಾಗೂ ಹರ್ಷದ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ಗಾಯಾಳುಗಳನ್ನು ಕಾರಿನಿಂದ ಹೊರತೆಗೆದು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಸ್ಥಳದಲ್ಲಿ ಪರಿಶೀಲನೆ ಕೈಗೊಂಡಿರುವ ಪೊಲೀಸರು ಘಟನೆಗೆ ಸಂಬಂಧಿಸಿದ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಅಪಘಾತದ ನಿಖರ ಕಾರಣ ತಿಳಿದುಬರಬೇಕಿದೆ.
ಗೋಕಾಕ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Laxmi News 24×7