ಬೆಂಗಳೂರು : ಕಾಂಗ್ರೆಸ್ ಹಿರಿಯ ಶಾಸಕ ಆರ್.ವಿ.ದೇಶಪಾಂಡೆ ಅವರನ್ನು ಹಂಗಾಮಿ ವಿಧಾನ ಸಭಾಧ್ಯಕ್ಷರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸದನದಿಂದ ಹೊಸ ಸಭಾಧ್ಯಕ್ಷರು ಆಯ್ಕೆಯಾಗುವವರೆಗೆ ಕರ್ತವ್ಯ ನಿರ್ವಹಿಸುವಂತೆ ತಿಳಿಸಲಾಗಿದೆ. ಸೋಮವಾರದಿಂದ ಬುಧವಾರದವರೆಗೆ ಮೂರು ದಿನಗಳ ಕಾಲ ಅಧಿವೇಶನ ನಡೆಯಲಿದೆ. ನೂತನ ಶಾಸಕರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಪ್ರಮಾಣ ವಚನದ ಕಾರ್ಯ ಕಲಾಪ ನಿರ್ವಹಿಸಲು ಆರ್.ವಿ.ದೇಶಪಾಂಡೆಯವರನ್ನು ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಲಾಗಿದೆ.
ಇದೇ ಅಧಿವೇಶನದಲ್ಲಿ ಪೂರ್ಣಾವಧಿ ಸ್ಪೀಕರ್ ಆಯ್ಕೆ ಮಾಡಲಾಗುವುದು. ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಟಿ.ಬಿ.ಜಯಚಂದ್ರ, ಹೆಚ್.ಕೆ.ಪಾಟೀಲ್, ಬಸವರಾಜ ರಾಯರೆಡ್ಡಿ ಸೇರಿದಂತೆ ಕೆಲವರ ಹೆಸರು ಕೇಳಿ ಬರುತ್ತಿದೆ. ಆದರೆ, ಕಾಂಗ್ರೆಸ್ ಪಕ್ಷ ಯಾರನ್ನು ಸ್ಪೀಕರ್ ಹುದ್ದೆಗೆ ಆಯ್ಕೆ ಮಾಡುತ್ತೆ? ಎಂಬುದು ಕುತೂಹಲ ಕೆರಳಿಸಿದೆ. ಸ್ಪೀಕರ್ ಹುದ್ದೆಗೆ ಹೆಸರು ಕೇಳಿ ಬರುತ್ತಿರುವ ಶಾಸಕರು ಮಂತ್ರಿಗಿರಿಯ ಮೇಲೂ ಕಣ್ಣಿಟ್ಟಿದ್ದಾರೆ.