ಬೆಂಗಳೂರು: ರಾಜ್ಯದ 8 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಜಲಜೀವನ್ ಮಿಷನ್ ಯೋಜನೆಯ ಪ್ರಗತಿಯ ಕುರಿತಂತೆ ಮತ್ತು ಇಂದಿರಾ ಕ್ಯಾಂಟೀನ್ ನಿರ್ವಹಣೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಸಭೆಯ ಮುಖ್ಯಾಂಶ ಇಂತಿದ್ದು, ರಾಜ್ಯದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾಡಳಿತಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಾಯಿತು. ರಾಜ್ಯದಲ್ಲಿ ಮುಂಗಾರು ಜೂನ್ 10ರಂದು ಪ್ರಾರಂಭವಾಗಿದೆ. ಜೂನ್ 1ರಿಂದ 11ರವರೆಗಿನ ಮಾಹಿತಿ ಪ್ರಕಾರ ರಾಜ್ಯದ ವಾಡಿಕೆ ಮಳೆಗಿಂತ ಶೇ.67ರಷ್ಟು ಕೊರತೆ ಇದೆ. ಮುಂದಿನ ದಿನಗಳಲ್ಲಿ ಇದು ವಾಡಿಕೆಯಷ್ಟು ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದರೆ ಕಳೆದ ಕೆಲವು ದಿನಗಳಲ್ಲಿ ಮಳೆಯ ಕೊರತೆಯಿಂದಾಗಿ ಕೆಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆಯಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ.
ರಾಜ್ಯದ 15 ಜಿಲ್ಲೆಗಳಲ್ಲಿ 322 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ಹಾಗೂ 148 ಗ್ರಾಮಗಳಲ್ಲಿ ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆಗೆ ಪಡೆದು ಕುಡಿಯುವ ನೀರು ಒದಗಿಸಲಾಗುತ್ತಿದೆ. ಪೂರ್ವ ಮುಂಗಾರು ಕೊರತೆಯ ಕಾರಣ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿತ್ತು. ಮುಂಗಾರು ಪ್ರಾರಂಭವಾಗಿರುವುದರಿಂದ ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಬಗೆಹರಿಯುವ ನಿರೀಕ್ಷೆ ಇದೆ. ಅಲ್ಲದೆ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಕೊರತೆ ಇರದಿದ್ದರೂ ಕಲುಷಿತ ನೀರಿನ ಸಮಸ್ಯೆ ಉಂಟಾಗಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಇದರ ವರದಿಯನ್ನಾಧರಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ. ಜಿಪಂ ಸಿಇಒಗಳು ತಾಲ್ಲೂಕಿಗೆ ಭೇಟಿ ನೀಡಬೇಕು. ಪಿಡಿಒಗಳ ಕಾರ್ಯನಿರ್ವಹಣೆ ಬಗ್ಗೆ ನಿಗಾ ವಹಿಸಬೇಕು. ಜಲಜೀವನ್ ಮಿಷನ್ ಯೋಜನೆಯಡಿ ನೀರಿನ ಪೈಪ್ ಲೈನ್ ಅಳವಡಿಸಿರುವುದರ ಗುಣಮಟ್ಟ ಪರಿಶೀಲಿಸಿ. ಕೊಳವೆ ಒಡೆದುಹೋಗುವುದು ಮತ್ತಿತರ ಸಮಸ್ಯೆ ಉಂಟಾದರೆ ಕ್ರಮ ಕೈಗೊಳ್ಳಲು ಸೂಚಿಸಲಾಯಿತು.
ಅಧಿಕಾರಿಗಳಿಗೆ ಸೂಚನೆ: ಕುಡಿಯುವ ನೀರಿನ ಸಮಸ್ಯೆ ಕುರಿತು ಎಚ್ಚರಿಕೆಯಿಂದ ಕೆಲಸ ಮಾಡಬೇಕು. ನೀರಿನ ಸಮಸ್ಯೆ ಉದ್ಭವಿಸಿದ 24 ಗಂಟೆಯೊಳಗೆ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳೂ ಸಹ ಈ ಕುರಿತು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಯಿತು.
ಯಾವುದೇ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವ ಆಗಿದ್ದರೆ, ಕೂಡಲೇ ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಆಡಳಿತಾತ್ಮಕ ವಿಚಾರಗಳಿಗೆ ವಿಳಂಬ ಧೋರಣೆ ಸರಿಯಲ್ಲ. ಈ ಕುರಿತು ಅಧಿಕಾರ ಪ್ರತ್ಯಾಯೋಜನೆ ಮಾಡುವ ಕುರಿತೂ ಚಿಂತನೆ ನಡೆಸಲು ಸೂಚನೆ ನೀಡಲಾಯಿತು. ಜಲಜೀವನ್ ಮಿಷನ್ ಮೂಲಕ ನೀರು ಒದಗಿಸಿದ ಗ್ರಾಮಗಳಲ್ಲಿ ಇಒ, ಎಂಜಿನಿಯರುಗಳು ತಪಾಸಣೆ ನಡೆಸಿ, ಪೈಪ್ ಲೈನ್ಗಳನ್ನು ಪರಿಶೀಲಿಸಿ, ಸಮಸ್ಯೆಗಳಿದ್ದಲ್ಲಿ ಸರಿ ಪಡಿಸಬೇಕು. ಕಲುಷಿತ ನೀರು ಸೇವನೆ ಪ್ರಕರಣಗಳು ಮರುಕಳಿಸಬಾರದು ಎಂದು ಎಚ್ಚರಿಕೆ ನೀಡಲಾಯಿತು.
Laxmi News 24×7