ಬೆಂಗಳೂರು: ವಿಧಾನಸಭೆಯಲ್ಲಿ ಪ್ರತಿಪಕ್ಷ ಶಾಸಕರನ್ನು ಕಲಾಪದಿಂದ ಅಮಾನತು ಮಾಡಿರುವ ಕ್ರಮ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.
ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಶಾಸಕರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ನಂತರ ವಿಧಾನಸೌಧದಲ್ಲಿ ಮಾತನಾಡಿದ ಅವರು, ಸ್ಪೀಕರ್ ಅವರು ಉದ್ದೇಶಪೂರ್ವಕವಾಗಿ ಶಾಸಕರನ್ನು ಅಮಾನತು ಮಾಡಿದ್ದಾರೆ. ಮುಖ್ಯಮಂತ್ರಿಯ ಸನ್ನೆ ಮೇರೆಗೆ ಸ್ಪೀಕರ್ ಹುಡುಗಾಟಿಕೆ ಮಾಡಿದ್ದಾರೆ ಎಂದು ಹರಿಹಾಯ್ದರು.
ಪ್ರತಿಪಕ್ಷಗಳ ಒಕ್ಕೂಟಕ್ಕೆ ಇಂಡಿಯಾ ಎಂದು ಹೆಸರಿಟ್ಟು, ಇವತ್ತು ಪ್ರತಿಪಕ್ಷಗಳನ್ನು ಹತ್ತಿಕ್ಕಲು ಹೊರಟಿದ್ದಾರೆ. ಪ್ರಜಾಪ್ರಭುತ್ವ ಕಗ್ಗೊಲೆ ಮಾಡಿದ್ದಾರೆ. ಸರ್ಕಾರದ ನೀತಿ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪೀಠದಲ್ಲಿ ದಲಿತರು ಕುಳಿತುಕೊಂಡಿದ್ದಾರೆ ಅನ್ನುವ ಕಾಂಗ್ರೆಸ್ ಆರೋಪದ ಬಗ್ಗೆ ಕೆಂಡಾಮಂಡಲರಾದ ಮಾಜಿ ಮುಖ್ಯಮಂತ್ರಿಗಳು, ಇದು ಕ್ಷುಲ್ಲಕ, ಕೀಳು ಮಟ್ಟದ ಅಭಿರುಚಿ. ದಲಿತರ ಅನುಕುಂಪ ಪಡೆಯಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಆ ಪೀಠದಲ್ಲಿ ಕುಳಿತಿರೋರು ಉಪ ಸಭಾಧ್ಯಕ್ಷರು. ಆ ವಿಷಯವನ್ನು ಕಾಂಗ್ರೆಸ್ನವರು ಅರ್ಥ ಮಾಡಿಕೊಳ್ಳಬೇಕು ಎಂದರು.