ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಕಡೆಗಣಿಸುತ್ತಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ವಿಶ್ವವಿದ್ಯಾಲಯಗಳಿಗೆ ಸರ್ಕಾರ ಅನುದಾನ ಬಂದ್ ಮಾಡಿರುವುದರಿಂದ ವಿದ್ಯಾರ್ಥಿಗಳು ಜ್ವಲಂತ ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಈ ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಬೇಕಾಗುವ ಅನುದಾನ ನೀಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸಚಿವರಿಗೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಎಚ್ಚರಿಕೆ ನೀಡಿದರು.
ವಿದ್ಯಾರ್ಥಿಗಳಿಗೆ ಸೂಕ್ತ ಮೂಲಭೂತ ಸೌಕರ್ಯ ಒದಗಿಸಲು ಹಣವಿಲ್ಲ ಎಂದು ವಿಶ್ವವಿದ್ಯಾಲಯಗಳು ಹೇಳುತ್ತಿವೆ. ನೌಕರರಿಗೆ ಸರಿಯಾಗಿ ವೇತನ ನೀಡುತ್ತಿಲ್ಲ. ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ನೀಡುತ್ತಿಲ್ಲ. ಲ್ಯಾಪ್ ಟಾಪ್ ವಿತರಣೆ ಮಾಡುತ್ತಿಲ್ಲ. ಆರ್ಥಿಕ ನಷ್ಟದಿಂದ ಯುಪಿಎಸ್ ಕಾಲೇಜು ಮುಚ್ಚಲಾಗಿದೆ. ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಲಾಗಿದೆ. ಸರಿಯಾಗಿ ಹಾಸ್ಟೆಲ್ ಸೌಲಭ್ಯ ಇಲ್ಲ. ಈ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.