ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ರಾಜ್ಯಮಟ್ಟದ ಸಮಾರಂಭಕ್ಕೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದೆ.
ಈ ನಿಟ್ಟಿನಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು. ಇಂದು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿದ್ಧತೆಗಳ ಕುರಿತು ಕರೆದಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು.
ಆಗಸ್ಟ್ 15ರಂದು ಬೆಳಗ್ಗೆ 8:58ಕ್ಕೆ ಮುಖ್ಯಮಂತ್ರಿಗಳು ಮೈದಾನಕ್ಕೆ ಆಗಮಿಸಲಿದ್ದು, 9:00 ಗಂಟೆಗೆ ರಾಷ್ಟ್ರ ಧ್ವಜಾರೋಹಣ ಮಾಡುವರು. ನಂತರ ತೆರೆದ ಜೀಪಿನಲ್ಲಿ ಪೆರೇಡ್ ಪರಿವೀಕ್ಷಣೆ ಮತ್ತು ಗೌರವ ರಕ್ಷೆ ಸ್ವೀಕರಿಸಿ ನಾಡಿನ ಜನತೆಗೆ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಲಿದ್ದಾರೆ. ಪಂಥಸಂಚಲನದಲ್ಲಿ ಕೆಎಸ್ಆರ್ಪಿ, ಸಿಆರ್ಪಿಎಫ್, ಬಿಎಸ್ಎಫ್, ಸಿಎಆರ್, ಕೆಎಸ್‌ಐಎಸ್‌ಎಫ್, ಟ್ರಾಫಿಕ್ ಪೊಲೀಸ್, ಮಹಿಳಾ ಪೊಲೀಸ್, ಹೋಂ ಗಾರ್ಡ್, ಟ್ರಾಫಿಕ್ ವಾರ್ಡನ್, ಅಗ್ನಿಶಾಮಕ ದಳ ಸಿಬ್ಬಂದಿ, ಡಾಗ್ ಸ್ಕ್ವಾಡ್ ಮತ್ತು ಬ್ಯಾಂಡ್ ಹಾಗೂ ವಿವಿಧ ಶಾಲೆಗಳ ಮಕ್ಕಳನ್ನೊಳಗೊಂಡ ಕವಾಯತು ಸೇರಿ ಒಟ್ಟು 38 ತುಕಡಿಗಳಲ್ಲಿ ಸುಮಾರು 1,350 ಮಂದಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಸ್ವಾತಂತ್ರ್ಯ ದಿನಾಚರಣೆಗೆ ಸಿದ್ಧತೆಪದ ದೇವರಾಜ್ ತಂಡದಿಂದ ನಾಡಗೀತೆ ಮತ್ತು ರೈತ ಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಬೆಂಗಳೂರು ದಕ್ಷಿಣ ವಲಯದ ಜೆ.ಪಿ.ನಗರದ ಕರ್ನಾಟಕ ಪಬ್ಲಿಕ್ ಶಾಲೆಯ 750 ಮಕ್ಕಳು ‘ವೀರ ನಮನ’ ನೃತ್ಯ ಪ್ರದರ್ಶಿಸಲಿದ್ದಾರೆ. ಬೆಂಗಳೂರು ಉತ್ತರ ವಲಯದ ಹಾರೋಹಳ್ಳಿಯ ಬಿಬಿಎಂಪಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ 700 ಮಕ್ಕಳಿಂದ ‘ವೀರ ಭೂಮಿ ವಿಧುರಾಶ್ವತ್ಥ ಧ್ವಜ ಸತ್ಯಾಗ್ರಹ’ ಹಾಗೂ ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ 50 ಮಕ್ಕಳಿಂದ ‘ರೋಪ್ ಸ್ಕಿಪಿಂಗ್’ ಕಾರ್ಯಕ್ರಮಗಳನ್ನು ನಡೆಸಿಕೊಳ್ಳಲಿದ್ದಾರೆ ಎಂದು ತಿಳಿಸಿದರು.
Laxmi News 24×7