Breaking News

ಮಹಾತ್ಮ ಗಾಂಧಿ ಪ್ರತಿಮೆ ಹಾನಿಗೊಳಿಸಿದ ಇಬ್ಬರು ಕಿಡಿಗೇಡಿಗಳ ಬಂಧನ: ಎಸ್ಪಿ ಮಿಥುನ್ ಕುಮಾರ್

Spread the love

ಶಿವಮೊಗ್ಗ : ಆಗಸ್ಟ್ 21 ರಂದು ಭದ್ರಾವತಿ ತಾಲೂಕು ಹೊಳೆಹೊನ್ನೂರು ಪಟ್ಟಣದ ಗಾಂಧಿ ವೃತ್ತದಲ್ಲಿನ ಮಹಾತ್ಮ ಗಾಂಧಿ ಮೂರ್ತಿಯನ್ನು ಧ್ವಂಸಗೊಳಿಸಿದ ಇಬ್ಬರು ಆರೋಪಿಗಳನ್ನು ಹೊಳೆಹೊನ್ನೂರು ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಅವರು ಮಾಧ್ಯಮಗೋಷ್ಟಿ ನಡೆಸಿ, ಬಂಧಿತ ಆರೋಪಿಗಳ ಕುರಿತು ಮಾಹಿತಿ ನೀಡಿದರು. ಆಗಸ್ಟ್ 21ರ ಬೆಳಗಿನ ಜಾವ ಕಿಡಿಗೇಡಿಗಳಿಬ್ಬರು ಬೈಕ್​ನಲ್ಲಿ ಬಂದು ಗಾಂಧಿ ಪ್ರತಿಮೆಯನ್ನು ಧ್ವಂಸ ಮಾಡಿದ್ದರು. ಈ ಕುರಿತು ತನಿಖೆ ಪ್ರಾರಂಭಿಸಿದ ಪೊಲೀಸರು ಸಿ ಸಿ ಕ್ಯಾಮೆರಾ ದೃಶ್ಯವನ್ನು ಪರಿಶೀಲಿಸಿ, ಚಿತ್ರದುರ್ಗ ಜಿಲ್ಲೆಯ ಪಂಡ್ರಹಳ್ಳಿಯ ವಿನಯ್ ಹಾಗೂ ಗಣೇಶ್ ಎಂಬುವರನ್ನು ಬಂಧಿಸಿದ್ದಾರೆ.

ಬಂಧಿತರು ತಮ್ಮ ಗ್ರಾಮದಿಂದ ಜೋಗ ಜಲಪಾತಕ್ಕೆ ಹೋಗುವಾಗ ಈ ಕೃತ್ಯ ನಡೆಸಿದ್ದಾರೆ. ಗಾಂಧಿ ಪ್ರತಿಮೆ ಧ್ವಂಸಗೊಳಿಸಿದ ನಂತರ ಶಿವಮೊಗ್ಗಕ್ಕೆ ಬಂದು ತಂಗಿದ್ದಾರೆ. ಬೆಳಗ್ಗೆ ಜೋಗಕ್ಕೆ ಹೋಗದೆ ಪುನಃ ತಮ್ಮ ಗ್ರಾಮಕ್ಕೆ ವಾಪಸ್ ಆಗಿದ್ದಾರೆ. ಪೊಲೀಸರ ತ‌ನಿಖೆಯಿಂದ ಆರೋಪಿಗಳ ಕೃತ್ಯ ತಿಳಿದು ಬಂದಿದೆ.

ನಂತರ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇಬ್ಬರು ತಮ್ಮ ಕೃತ್ಯವನ್ನು ಒಪ್ಪಿಕೊಂಡಿದ್ದಾರೆ. ಇಂದು ಇಬ್ಬರನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗುವುದು. ನಂತರ ಅವರನ್ನು ವಶಕ್ಕೆ ಪಡೆದು ಮುಂದಿನ ವಿಚಾರಣೆ ನಡೆಸಲಾಗುವುದು ಎಂದು ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ. ಆರೋಪಿಗಳನ್ನು ಬಂಧಿಸಲು 50 ಜನರ ತಂಡವನ್ನು ರಚಿಸಲಾಗಿತ್ತು. ಈ ತಂಡಕ್ಕೆ ಅಭಿನಂದಿಸಿದ ಎಸ್​ಪಿ ಬಹುಮಾನವನ್ನು ಸಹ ಘೋಷಿಸಿದ್ದಾರೆ.

ಕಾನೂನಿನ ಪ್ರಕಾರ ಕಠಿಣ ಶಿಕ್ಷೆ: ಈ ಘಟನೆಯ ಬಗ್ಗೆ ಟ್ವೀಟ್​ ಮಾಡಿದ್ದ ಸಿಎಂ ಸಿದ್ದರಾಮಯ್ಯ ಅವರು, ”ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆ ಧ್ವಂಸಗೊಳಿಸಿರುವ ದೇಶವಿರೋಧಿ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ನೆಲದ ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆ, ಸಂವಿಧಾನ ಮತ್ತು ಕಾನೂನಿನ ಬಗೆಗೆ ಗೌರವ ಇಲ್ಲದವರು ಮಾತ್ರ ಇಂತಹ ಹೀನ ಕೃತ್ಯ ಎಸಗಲು ಸಾಧ್ಯ. ಈ ಕುಕೃತ್ಯದ ಹಿಂದೆ ಯಾರೇ ಇರಲಿ ಅವರನ್ನು ಹಿಡಿದು ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಒಳಪಡಿಸುತ್ತೇವೆ. ಯಾರೊಬ್ಬರೂ ಈ ಬಗ್ಗೆ ಉದ್ವೇಗಕ್ಕೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳದೆ, ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ” ಎಂದು ಬರೆದುಕೊಂಡಿದ್ದರು.

ಹೊಳೆಹೊನ್ನೂರು ಪಟ್ಟಣಕ್ಕೆ ಪೊಲೀಸ್ ವರಿಷ್ಠಾಧಿಕಾರಿ‌ ಮಿಥುನ್ ಕುಮಾರ್ ಜಿ ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಪ್ರತಿಭಟನಾಕಾರರನ್ನು ಭೇಟಿ ಮಾಡಿ ಶಾಂತಿಯುತ ಪ್ರತಿಭಟನೆ ನಡೆಸುವಂತೆ ಸೂಚಿಸಿದ್ದರು. ಆರೋಪಿಗಳನ್ನು ಆದಷ್ಟು ಬೇಗ ಬಂಧಿಸುವುದಾಗಿ ಭರವಸೆ ನೀಡಿದ ನಂತರ ಜನರು ಪ್ರತಿಭಟನೆ ಹಿಂಪಡೆದುಕೊಂಡಿದ್ದರು.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ