ಮೈಸೂರು : “ನಾವು ಆಪರೇಷನ್ ಹಸ್ತ ಮಾಡುತ್ತಿಲ್ಲ.
ನಮ್ಮ ಪಕ್ಷದ ವರ್ಚಸ್ಸು ಮತ್ತು ಸಿದ್ಧಾಂತವನ್ನು ಒಪ್ಪಿ ಬಿಜೆಪಿ, ಜೆಡಿಎಸ್ ನಾಯಕರುಗಳು ಅವರಾಗಿಯೇ ಬರುತ್ತೇವೆ ಎನ್ನುತ್ತಿದ್ದಾರೆ. ಹಾಗೆ ಬರುವವರಿಗೆ ನಮ್ಮ ಸ್ವಾಗತ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಗೃಹ ಲಕ್ಷ್ಮಿ ಯೋಜನೆ ಉದ್ಘಾಟನಾ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಲು ಇಂದು ಆಗಮಿಸಿದ ಡಿ.ಕೆ.ಶಿವಕುಮಾರ್, ಮೈಸೂರಿನ ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದರು.
“ನಾವಾಗಿಯೇ ಯಾರನ್ನೂ ಕರೆತರುವ ಪ್ರಯತ್ನ ಮಾಡುತ್ತಿಲ್ಲ. ಅವರ ಭವಿಷ್ಯದ ದೃಷ್ಟಿಯಿಂದ ನಮ್ಮ ಪಕ್ಷದ ವರ್ಚಸ್ಸನ್ನು ಅವರೇ ನಿರ್ಧರಿಸುತ್ತಿದ್ದಾರೆ. ಎಷ್ಟು ಜನ ಬರುತ್ತಾರೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ. ಎಲ್ಲದಕ್ಕೂ ಸಮಯ, ಕಾಲ, ಘಳಿಗೆ ಎಂಬುದಿದೆ. ಆ ಘಳಿಗೆ ಬಂದಾಗ ಎಲ್ಲವೂ ನಡೆಯುತ್ತದೆ” ಎಂದು ಸೂಚ್ಯವಾಗಿ ತಿಳಿಸಿದರು.
ಜೆಡಿಎಸ್ ಶಾಸಕರನ್ನು ಕಾಂಗ್ರೆಸ್ಗೆ ಸೆಳೆಯುವ ಪ್ರಯತ್ನ ನಡೆಯುತ್ತಿದೆ ಎಂಬ ವಿಚಾರಕ್ಕೆ, “ಇಂತಹ ಮಾತುಗಳನ್ನು ನಾನು ಹೇಳುತ್ತಾ ಹೋದರೆ ಅದು ಬಹಳ ದೊಡ್ಡದಾಗುತ್ತದೆ. ಈಗ ಅದರ ಬಗ್ಗೆ ಚರ್ಚೆ ಬೇಡ” ಎಂದರು.
ಗೃಹ ಲಕ್ಷ್ಮಿ ಯೋಜನೆ ಕಾರ್ಯಕ್ರಮ ಬೆಳಗಾವಿಯಿಂದ ಮೈಸೂರಿಗೆ ಶಿಫ್ಟ್ ಆಗಿರುವ ವಿಚಾರಕ್ಕೆ, “ಯೋಜನೆ ಮೈಸೂರಿಗೆ ಶಿಫ್ಟ್ ಆಗಿರುವುದರ ಹಿಂದೆ ಯಾವುದೇ ರಾಜಕೀಯ ಇಲ್ಲ. ಬೆಳಗಾವಿಯಲ್ಲಿ ಇನ್ನೊಂದು ಕಾರ್ಯಕ್ರಮ ಮಾಡಲು ಪ್ಲಾನ್ ಮಾಡಿದ್ದೇವೆ. ಇದು ಒಮ್ಮತದ ತೀರ್ಮಾನ” ಎಂದು ತಿಳಿಸಿದರು.