ಬೆಂಗಳೂರು : ಚುನಾವಣಾ ಅಕ್ರಮದ ಆರೋಪದ ಮೇಲೆ ಹಾಸನ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಿ ಹೊರಡಿಸಿರುವ ಆದೇಶಕ್ಕೆ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುವವರೆಗೂ ತಡೆಯಾಜ್ಞೆ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಮಧ್ಯಂತರ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್, ತೀರ್ಪು ಕಾಯ್ದಿರಿಸಿದೆ.
ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರ ಪೀಠ ತೀರ್ಪು ಕಾಯ್ದಿರಿಸಿತು. ಅಲ್ಲದೆ, ಮುಂದಿನ ಸೋಮವಾರ ಅಥವಾ ಮಂಗಳವಾರ ತೀರ್ಪು ಪ್ರಕಟಿಸಲಾಗುವುದು ಎಂದು ನ್ಯಾಯಮೂರ್ತಿಗಳು ಇದೇ ವೇಳೆ ಪಕ್ಷಕಾರರ ಪರ ವಕೀಲರಿಗೆ ತಿಳಿಸಿದರು.
ಅರ್ಜಿ ವಿಚಾರಣೆ ವೇಳೆ, ಪ್ರಜ್ವಲ್ ಪರ ಹಿರಿಯ ವಕೀಲ ಉದಯಹೊಳ್ಳ, ಅಸಿಂಧು ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗುವುದು. ಅಲ್ಲಿಯವರೆಗೆ ಅಸಿಂಧು ಆದೇಶಕ್ಕೆ ತಡೆ ನೀಡಬೇಕು. ಮೇಲ್ಮನವಿ ಸಲ್ಲಿಸುವವರೆಗೆ ತಡೆಯಾಜ್ಞೆ ನೀಡಲು ಈ ನ್ಯಾಯಾಲಯಕ್ಕೆ ಅವಕಾಶವಿದೆ ಎಂದು ತಿಳಿಸಿ ಆ ಕುರಿತ ನಿಯಮಗಳು ಮತ್ತು ಇದೇ ಸಂಬಂಧ ಹಲವು ತೀರ್ಪುಗಳೊಂದಿಗೆ ವಿವರಿಸಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ದೇವರಾಜೇಗೌಡ ಪರ ಹಿರಿಯ ವಕೀಲೆ ಪ್ರಮೀಳಾ ನೇಸರ್ಗಿ ಅವರು, ಅಸಿಂಧು ಆದೇಶಕ್ಕೆ ತಡೆ ನೀಡಬಾರದು. ತಡೆ ನೀಡಲು ಈ ನ್ಯಾಯಾಲಯಕ್ಕೆ ಅವಕಾಶವಿಲ್ಲ. ಆದೇಶ ಹೊರಡಿಸಿದ ದಿನವೇ ತಡೆಗೆ ಕೋರಿ ಅರ್ಜಿ ಸಲ್ಲಿಸಬೇಕಿತ್ತು. ಆದರೆ, ಅರ್ಜಿ ಸಲ್ಲಿಸಲು ವಿಳಂಬ ಮಾಡಲಾಗಿದೆ ಎಂದು ಆಕ್ಷೇಪಿಸಿದರು. ಮತ್ತೊಬ್ಬ ಅರ್ಜಿದಾರ ಎ.ಮಂಜು ಪರ ವಕೀಲರು, ರೇವಣ್ಣ ಅವರ ಮಧ್ಯಂತರ ಅರ್ಜಿಗೆ ತಮ್ಮ ಯಾವುದೇ ಆಕ್ಷೇಪಣೆ ಇಲ್ಲ ಎಂದರು. ವಾದ, ಪ್ರತಿವಾದ ಆಲಿಸಿದ ನ್ಯಾಯಪೀಠ, ತೀರ್ಪು ಕಾಯ್ದಿರಿಸಿದೆ.
ವಾದ ಆಲಿಸಿದ ನ್ಯಾಯಪೀಠ, ಚುನಾವಣೆಯಲ್ಲಿ ಅಭ್ಯರ್ಥಿ ಆಯ್ಕೆಯಾಗಿವುದನ್ನು ಅಸಿಂಧುಗೊಳಿಸಿದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ಗೆ ಅವಕಾಶ ಇಲ್ಲ ಎಂಬ ಪ್ರಮೀಳಾ ನೇಸರ್ಗಿ ಅವರ ವಾದವನ್ನು ಒಪ್ಪದ ನ್ಯಾಯಮೂರ್ತಿಗಳು, ಅಸಿಂಧು ಆದೇಶ ಮಾಡಿದ ಮೇಲೆ ರೇವಣ್ಣ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುವವರೆಗೆ ತಡೆ ನೀಡಲು ಹೈಕೋರ್ಟ್ಗೆ ಅವಕಾಶವಿದೆ. ಮೇಲ್ಮನವಿ ಸಲ್ಲಿಕೆಗೆ 30 ದಿನಗಳ ಕಾಲಾವಕಾಶ ಇದೆ. ಅಲ್ಲಿಯವರೆಗೆ ಅಸಿಂಧು ಆದೇಶಕ್ಕೆ ತಡೆ ನೀಡಲು ಜನಪ್ರತಿನಿಧಿಗಳ ಕಾಯ್ದೆಯಲ್ಲಿಯೇ ಅವಕಾಶವಿದೆ. ತಡೆಯಾಜ್ಞೆ ನೀಡುವುದಕ್ಕೆ ಹೈಕೋರ್ಟ್ ನಿರ್ಬಂಧವಿದೆ ಎಂಬುದನ್ನು ಪ್ರತಿಪಾದಿಸುವ ಯಾವುದೇ ನಿಯಮಗಳು ಇಲ್ಲ ಎಂದು ಮೌಖಿಕವಾಗಿ ನುಡಿದರು.
ಸಂಸದರಾಗಿ ಪ್ರಜ್ವಲ್ ರೇವಣ್ಣ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಿ ನ್ಯಾಯಮೂರ್ತಿ ಕೆ.ನಟರಾಜನ್ ಅವರ ಪೀಠ ಸೆ.1ರಂದು ತೀರ್ಪು ನೀಡಿ, ಅದರ ಪ್ರತಿಯನ್ನು ಸಂಸತ್ ಸ್ಪೀಕರ್ಗೆ ಕಳುಹಿಸಲು ರಿಜಿಸ್ಟ್ರಿಗೆ ನಿರ್ದೇಶಿಸಿತ್ತು. ಸೆ.4ರಂದು ಹೈಕೊರ್ಟ್ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದ ಪ್ರಜ್ವಲ್, ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುವವರೆಗೆ ಅಸಿಂಧು ಆದೇಶಕ್ಕೆ ತಡೆ ನೀಡುವಂತೆ ಕೋರಿದ್ದರು. ಸೆ. 6ರಂದು ಆ ಅರ್ಜಿ ವಿಚಾರಣೆಗೆ ಕೈಗೆತ್ತಿಕೊಂಡಿದ್ದ ಪೀಠ, ಆಕ್ಷೇಪಣೆ ಸಲ್ಲಿಸಲು ಮೂಲ ಚುನಾವಣಾ ತಕರಾರು ಅರ್ಜಿದಾರ ದೇವರಾಜೇಗೌಡಗೆ ಸೆ.8ರವರೆಗೆ ಕಾಲಾವಕಾಶ ನೀಡಿತ್ತು.