ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಗುಡುಗಿದ್ದ ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್ಗೆ ಎಐಸಿಸಿ ಶೋಕಾಸ್ ನೊಟೀಸ್ ಜಾರಿ ಮಾಡಿದೆ.
ಎಐಸಿಸಿ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದ್ದು, ಹತ್ತು ದಿನಗಳೊಳಗೆ ಉತ್ತರಿಸುವಂತೆ ತಿಳಿಸಿದೆ.
ಕಳೆದ ಶನಿವಾರ ಅತಿ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿಎಂ ವಿರುದ್ಧ ಬಿ.ಕೆ.ಹರಿಪ್ರಸಾದ್ ಅವರು ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದರು. ಇದು ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷವನ್ನು ತೀವ್ರ ಮುಜುಗರಕ್ಕೀಡು ಮಾಡಿತ್ತು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಕೂಡ ಎಐಸಿಸಿ ಬಳಿ ತಮ್ಮ ಅಸಮಾಧಾನ ಹೊರಹಾಕಿದ್ದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಳೆದ ಶನಿವಾರ ನಡೆದ ಈಡಿಗ, ಬಿಲ್ಲವ, ನಾಮಧಾರಿ, ಧೀವರು ಮತ್ತು ಅತಿ ಹಿಂದುಳಿದ ವರ್ಗಗಳ ಸಮಾನ ಮನಸ್ಕರ ಸಭೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ.ಹರಿಪ್ರಸಾದ್ ಅವರು ಸಿಎಂ ಸಿದ್ದರಾಮಯ್ಯ ಹೆಸರು ಹೇಳದೇ ಹರಿಹಾಯ್ದಿದ್ದರು.
ಸಮಾವೇಶ ಉದ್ದೇಶಿಸಿ ಮಾತನಾಡಿದ್ದ ಬಿ ಕೆ ಹರಿಪ್ರಸಾದ್ ಅವರು, ಯಾರೋ ಕೆಲವರು ಪಂಚೆ ಹಾಕಿಕೊಂಡು ಹೂಬ್ಲೆಟ್ ವಾಚ್ ಕಟ್ಟಿಕೊಂಡು ಒಳಗಡೆ ಖಾಕಿ ಚಡ್ಡಿ ಹಾಕಿಕೊಂಡು ಸಮಾಜವಾದಿ ಅಂತ ಹೇಳಿದರೆ ಆಗೋದಿಲ್ಲ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಹೆಸರು ಉಲ್ಲೇಖಿಸದೇ ಹ್ಯೂಬ್ಲೆಟ್ ವಾಚ್ ಬಗ್ಗೆ ಪ್ರಸ್ತಾಪ ಮಾಡಿ ಮಜಾವಾದಿ ಎಂದು ಕಿಡಿ ಕಾರಿದ್ದರು.
ಹಿಂದಿನ ಯಾವ ಸಿಎಂಗಳೂ ಜಾತಿ ರಾಜಕಾರಣ ಮಾಡಲಿಲ್ಲ. ಬಂಗಾರಪ್ಪ ಅವರು ಎಲ್ಲಾ ಕಾರ್ಯಕ್ರಮಗಳನ್ನು ರೂಪಿಸಿ ಎಲ್ಲಾ ಜಾತಿ, ಬಡವರಿಗೆ ಅನುಕೂಲ ಮಾಡುವ ಕೆಲಸ ಮಾಡಿದ್ದರು. ಕಾಗೋಡು ತಿಮ್ಮಪ್ಪ, ಬಂಗಾರಪ್ಪ ಯಾರೂ ಜಾತಿ ರಾಜಕಾರಣ ಮಾಡಲಿಲ್ಲ. ಕಾಗೋಡು ತಿಮ್ಮಪ್ಪ ಅವರು ಸಮಾಜವಾದದಲ್ಲಿ ಇದ್ದಂತವರು. ಸಮಾಜವಾದದ ಹೋರಾಟ ಮಾಡಿದವರು. ಕಾಗೋಡು ಹೋರಾಟದಲ್ಲಿ ಮುಂಚೂಣಿಯಲ್ಲಿದ್ದವರು. ಸಮಾಜವಾದಿ ಅಂದುಕೊಂಡು ಮಜಾವಾದಿಯಾಗಿರಲಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಬಿ ಕೆ ಹರಿಪ್ರಸಾದ್ ಪರೋಕ್ಷ ವಾಗ್ದಾಳಿ ನಡೆಸಿದ್ದರು.
ಬಿ.ಕೆ.ಹರಿಪ್ರಸಾದ್ ಹೇಳಿಕೆ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ಗೆ ಆಹಾರವಾಗಿತ್ತು. ಇದನ್ನೇ ಬಳಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷಗಳು ವಾಗ್ದಾಳಿ ನಡೆಸುತ್ತಿವೆ. ಇದರಿಂದ ಕಾಂಗ್ರೆಸ್ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯಗೆ ತೀವ್ರ ಮುಜುಗರ ಉಂಟಾಗಿದೆ. ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಬಣ ಒತ್ತಾಯ ಮಾಡಿತ್ತು. ಇದೀಗ ಎಐಸಿಸಿ ಮಧ್ಯಪ್ರದೇಶಿಸಿ ಬಿ.ಕೆ.ಹರಿಪ್ರಸಾದ್ಗೆ ಶೋಕಾಸ್ ನೊಟೀಸ್ ಜಾರಿ ಮಾಡಿದೆ.