ಬೆಂಗಳೂರು: ಕಾವೇರಿ ನೀರು ಬಿಡುವ ಆದೇಶಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಮರು ಪರಿಶೀಲನಾ ಅರ್ಜಿಯನ್ನು ಇಂದು ಸಲ್ಲಿಸಲಾಗಿದೆ.
ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾವೇರಿ ನೀರು ಬಿಡುವ ಆದೇಶ ಪ್ರಶ್ನಿಸಿ ಕಾವೇರಿ ನೀರು ನಿರ್ವಹಣಾ ಮಂಡಳಿ ಮುಂದೆ ಮರು ಪರಿಶೀಲನಾ ಅರ್ಜಿ ಸಲ್ಲಿಸಲಾಗಿದೆ. ನಂತರ ಪರಿಸ್ಥಿತಿ ಅವಲೋಕಿಸಿ ಸರ್ವೋಚ್ಛ ನ್ಯಾಯಾಲಯದ ಮುಂದೆಯೂ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಲಾಗುವುದು ಎಂದು ತಿಳಿಸಿದರು.
ನಿನ್ನೆ ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು, ಅಡ್ವೊಕೇಟ್ ಜನರಲ್ ಅವರೊಂದಿಗೆ ಸಭೆ ನಡೆಸಿ ಸಲಹೆಗಳನ್ನು ಪಡೆಯಲಾಗಿದ್ದು, ಅದರಂತೆ ಕ್ರಮ ಕೈಗೊಳ್ಳಲಾಗುವುದು. ಕಾವೇರಿ ನೀರು ನಿರ್ವಹಣಾ ಮಂಡಳಿ ಮುಂದೆ ಇಂದು ಸಂಜೆ ಮರು ಪರಿಶೀಲನಾ ಅರ್ಜಿ ಸಲ್ಲಿಕೆಯಾಗಿದೆ. ಮರು ಪರಿಶೀಲನಾ ಅರ್ಜಿಯಲ್ಲಿ, ನೀರು ಬಿಡಲು ಸಾಧ್ಯವಿಲ್ಲ. ಮೇಕೆದಾಟು ಯೋಜನೆಗೆ ಅನುಮತಿ ಕೊಡಬೇಕು ಎಂದು ಮನವಿಯನ್ನು ಮಂಡನೆ ಮಾಡಲಾಗಿದೆ.
ನಿನ್ನೆ ಕಾವೇರಿ ನೀರು ನಿರ್ವಹಣಾ ಮಂಡಳಿ ಮತ್ತೆ ಮೂರು ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ದಿನಾಂಕ ವಿಸ್ತರಣೆ ಮಾಡಿ ಆದೇಶ ನೀಡಿತ್ತು. ಈ ಆದೇಶದ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ನೇತೃತ್ವದಲ್ಲಿ ಶುಕ್ರವಾರ ಕಾನೂನು ತಜ್ಙರೊಂದಿಗೆ ಸಮಾಲೋಚನೆ ನಡೆಸಲಾಗಿತ್ತು. ಈ ಸಭೆಯಲ್ಲಿ ಮಾಜಿ ಅಡ್ವೋಕೆಟ್ ಜನರಲ್ಗಳು, ಹಿರಿಯ ನ್ಯಾಯವಾದಿಗಳು ಸರ್ಕಾರಕ್ಕೆ ಹಲವು ಮಹತ್ವದ ಸಲಹೆ ಸೂಚನೆಗಳನ್ನು ನೀಡಿದ್ದರು.
ಈ ಸಭೆ ಬಳಿಕ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ , ನಿವೃತ್ತ ನ್ಯಾಯಮೂರ್ತಿಗಳು ಅವರ ಅನುಭವದಿಂದ ಕೆಲ ಸಲಹೆ ನೀಡಿದ್ದಾರೆ. ಅದರಂತೆ ಮೊದಲಿಗೆ ಕಾವೇರಿ ನೀರು ಬಿಡುಗಡೆ ಪ್ರಶ್ನಿಸಿ ಕೂಡಲೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಸುಪ್ರೀಂ ಕೋರ್ಟ್ ಮುಂದೆ ಮರುಪರಿಶೀಲನಾ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕಾವೇರಿ ನೀರು ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂಕೋರ್ಟ್ಗೆ ಮರು ಪರಿಶೀಲನಾ ಅರ್ಜಿ ಸಲ್ಲಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಮಾಹಿತಿ ಕೊಟ್ಟಿದ್ದರು.