ಕಿತ್ತೂರು ಉತ್ಸವವನ್ನು ಈ ಬಾರಿ ಕೂಡ ಅ.23 ರಿಂದ ಮೂರು ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು. ಈ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಕನಿಷ್ಠ ಮೂರು ಕೋಟಿ ರೂಪಾಯಿ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು” ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ ಚನ್ನಮ್ಮನ ಕಿತ್ತೂರಿನಲ್ಲಿ ಬುಧವಾರ(ಅ.4) ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮೂರು ದಿನಗಳ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಕನಿಷ್ಠ ಮೂರು ಕೋಟಿ ರೂಪಾಯಿ ಅನುದಾನದ ಅಗತ್ಯವಿದೆ. ಇದಕ್ಕಾಗಿ ಪ್ರಯತ್ನಿಸಲಾಗುವುದು. ಈಗಾಗಲೇ ಐದು ಕೋಟಿ ರೂಪಾಯಿ ನೀಡುವಂತೆ ಪ್ರಸ್ತಾವನೆ ಕಳಿಸಲಾಗಿದೆ.
ಲೋಕೋಪಯೋಗಿ ಇಲಾಖೆಯಿಂದ ಐದು ಕೋಟಿ ಖರ್ಚು:
ಲೋಕೋಪಯೋಗಿ ಇಲಾಖೆಯಿಂದ ಮುಂದಿನ ಉತ್ಸವದ ವೇಳೆಗೆ ಕನಿಷ್ಠ ಐದು ಕೋಟಿ ರೂಪಾಯಿ ಅನುದಾನವನ್ನು ಕಿತ್ತೂರು ಪಟ್ಟಣದಲ್ಲಿ ಅಭಿವೃದ್ಧಿಗಾಗಿ ಖರ್ಚು ಮಾಡಲಾಗುವುದು. ಈ ಹಣದಲ್ಲಿ ವೀರ ಹೋರಾಟಗಾರರ ಭಾವಚಿತ್ರಗಳ ಅನಾವರಣ, ಶೌಚಾಲಯ ನಿರ್ಮಾಣ ಸೇರಿದಂತೆ ವಿವಿಧ ರೀತಿಯ ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಸಚಿವರಾದ ಸತೀಶ್ ಜಾರಕಿಹೊಳಿ ಅವರು ಘೋಷಿಸಿದರು.
ಕಿತ್ತೂರು ಉತ್ಸವವನ್ನು ಈ ಬಾರಿ ವಿಜೃಂಭಣೆಯಿಂದ ಆಚರಿಸಲಾಗುವುದು. ದಸರಾ ಮಾದರಿಯಲ್ಲಿ ಉತ್ಸವ ಆಗಬೇಕು ಎಂಬುದು ಎಲ್ಲರ ಆಶಯವಾಗಿದೆ.
ಕಿತ್ತೂರು ಇತಿಹಾಸದ ಮೆರಗು ಸಾರುವಂತಹ ಛಾಯಾಚಿತ್ರಗಳ ಪ್ರದರ್ಶನವನ್ನು ಮುಂದಿನ ವರ್ಷದಿಂದ ಆರಂಭಿಸಲಾಗುವುದು.
ಸ್ಥಳೀಯ ಕಲಾವಿದರಿಗೆ ಹಾಗೂ ನಿರೂಪಕರಿಗೆ ಪ್ರಾಮುಖ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
50 ಶೌಚಾಲಯಗಳ ನಿರ್ಮಾಣ- ಕೆರೆ ಅಭಿವೃದ್ಧಿ ಭರವಸೆ:
ಕಿತ್ತೂರು ಪ್ರವಾಸಿ ತಾಣವಾಗಿರುವುದರಿಂದ ಕುಡಿಯುವ ನೀರು ಮತ್ತು ಶೌಚಾಲಯಗಳನ್ನು ಲೋಕೋಪಯೋಗಿ ಇಲಾಖೆಯ ವತಿಯಿಂದ 50 ಶೌಚಾಲಯಗಳನ್ನು ನಿರ್ಮಿಸಿಕೊಡಲಾಗುವುದು. ಇದಕ್ಕಾಗಿ ಪಟ್ಟಣ ಪಂಚಾಯತಿ ಮತ್ತು ಸ್ಥಳೀಯರು ಸೂಕ್ತ ಜಾಗೆಯನ್ನು ಒದಗಿಸಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಸಣ್ಣ ನೀರಾವರಿ ಇಲಾಖೆಯ ವತಿಯಿಂದ ಐತಿಹಾಸಿಕ ಪ್ರಾಮುಖ್ಯತೆ ಇರುವ ರಣಗಟ್ಟಿ ಕೆರೆ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.
ಅರ್ಹ ಹಾಗೂ ಪ್ರತಿಭಾವಂತ ಕಲಾವಿದರಿಗೆ ಹಾಗೂ ಸ್ಥಳೀಯರಿಗೆ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಉತ್ಸವಕ್ಕೆ ಇನ್ನಷ್ಟು ಮೆರುಗು ತರುವ ನಿಟ್ಟಿನಲ್ಲಿ ಎಲ್ಲರೂ ಸೇರಿ ಕೆಲಸವನ್ನು ಮಾಡೋಣ ಎಂದು ಹೇಳಿದರು.
ಕಿತ್ತೂರು ಸಮಗ್ರ ಅಭಿವೃದ್ಧಿಗೆ ಯೋಜನೆ ಅಗತ್ಯ:
ಕಿತ್ತೂರು ಅಭಿವೃದ್ಧಿಗೆ ಸಾಕಷ್ಟು ಅನುದಾನ ಖರ್ಚು ಮಾಡಲಾಗಿದೆ. ಆದಾಗ್ಯೂ ನಿರೀಕ್ಷಿತ ಸುಧಾರಣೆ ಕಂಡಿಲ್ಲ. ಆದ್ದರಿಂದ ಸಮಗ್ರ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡು ನಿರ್ದಿಷ್ಟ ಯೋಜನೆಯನ್ನು ರೂಪಿಸುವ ಅಗತ್ಯವಿದೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟರು