ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿದ ಆಸ್ತಿಗಳಿಕೆ ಆರೋಪ ಪ್ರಕರಣದ ತನಿಖೆಯನ್ನು ಸಿಬಿಐ ಮುಂದುವರಿಸುವಂತೆ ಹೈಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ಡಿ.ಕೆ.
ಶಿವಕುಮಾರ್ ಅವರ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸಿಬಿಐ ತನಿಖೆ ಮುಂದುವರೆಯುವ ಕಾರಣಕ್ಕೆ ಡಿ.ಕೆ.ಶಿವಕುಮಾರ್ ಅವರು ತಡಮಾಡದೇ ರಾಜೀನಾಮೆ ಸಲ್ಲಿಸಬೇಕು. ಉನ್ನತ ಹುದ್ದೆಯಲ್ಲಿರುವ ಡಿ.ಕೆ.ಶಿವಕುಮಾರರು ಸಾಕ್ಷ್ಯಾಧಾರಗಳನ್ನು ಮುಚ್ಚಿ ಹಾಕುವ ಎಲ್ಲ ಸಾಧ್ಯತೆಗಳಿವೆ. ಅವರು ಪ್ರಭಾವಿ ವ್ಯಕ್ತಿಯಾದ ಕಾರಣ ಸಾಕ್ಷಿ ನಾಶ ಮಾಡುವ ಸಾಧ್ಯತೆ ಎದ್ದು ಕಾಣುತ್ತದೆ ಎಂದು ಡಿಕೆಶಿ ವಿರುದ್ಧ ಹರಿಹಾಯ್ದರು.
ಶಿವಕುಮಾರ್ ಅವರು ರಾಜೀನಾಮೆ ಕೊಡದಿದ್ದರೆ ಸಿಎಂ ಸಿದ್ದರಾಮಯ್ಯ ಅವರೇ ಡಿಕೆಶಿ ಅವರ ರಾಜೀನಾಮೆ ಪಡೆಯಲಿ. ಇಲ್ಲವಾದರೆ ನಾವು ರಾಜ್ಯಪಾಲರನ್ನೂ ಭೇಟಿ ಮಾಡುತ್ತೇವೆ. ಇವತ್ತಿನ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ಕೊಡದಿದ್ದರೆ ನಾವು ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಕೊಡುತ್ತೇವೆ ಎಂದರು.
ಇವತ್ತು ಹೈಕೋರ್ಟ್ನಲ್ಲಿ ಒಂದು ಆದೇಶ ಹೊರಗೆ ಬಂದಿದೆ. ಡಿಸಿಎಂ ಡಿ.ಕೆ.ಶಿವಕುಮಾರ ಅವರ ವಿರುದ್ಧ ಸಿಬಿಐನಲ್ಲಿ ದಾಖಲಾಗಿದ್ದ ಕೇಸಿನ ತನಿಖೆ ನಡೆಸದಂತೆ ಈ ಮೊದಲು ತಡೆಯಾಜ್ಞೆ ತಂದಿದ್ದರು. ಇವತ್ತು ಆ ತಡೆಯಾಜ್ಞೆ ತೆರವುಗೊಳಿಸಿ ತನಿಖೆ ಮುಂದುವರೆಸಲು ಹೈಕೋರ್ಟ್ ಆದೇಶ ಕೊಟ್ಟಿದೆ. ಇದರಿಂದ ಇವತ್ತು ನ್ಯಾಯಕ್ಕೆ ಬೆಲೆ ಸಿಕ್ಕಿದೆ. ಈ ಆದೇಶದಿಂದ ಡಿ.ಕೆ.ಶಿವಕುಮಾರರಿಗೆ ಹಿನ್ನಡೆ ಆಗಿರಬಹುದು ಅಥವಾ ಬೇಸರ ಆಗಿರಬಹುದು.