ಯಾದಗಿರಿ: ಕಲಬುರಗಿಯಲ್ಲಿ ಬ್ಲೂಟೂತ್ ಬಳಕೆ ಮಾಡಿದಂತೆ ಯಾದಗಿರಿಯಲ್ಲಿಯೂ ಬಳಕೆ ಮಾಡಿದ್ದಾರೆ. ನಿಗಮ ಮಂಡಳಿಗಳ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುತ್ತಿರುವ ಪರೀಕ್ಷೆಯಲ್ಲಿ ಕೆಲವು ಅಭ್ಯರ್ಥಿಗಳು ಬ್ಲೂಟೂತ್ ಬಳಕೆ ಮಾಡಿದ್ದು, ನಗರ ಪೊಲೀಸರು ಪುಟ್ಟಪ್ಪ ಎಂಬ ಅಭ್ಯರ್ಥಿ ಸೇರಿದಂತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಪುಟ್ಟಪ್ಪ ಮೂಲತಃ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸೊನ್ನಾ ಗ್ರಾಮದವನು. ಈತ ಸೇರಿದಂತೆ ಪರೀಕ್ಷಾ ಕೇಂದ್ರದ ಹೊರಗಿದ್ದು, ಮಾಹಿತಿ ನೀಡುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಲ್ಲರೂ ಕಲಬುರಗಿ ಮೂಲದವರೆಂದು ತಿಳಿದು ಬಂದಿದೆ. ಈವರೆಗೆ 6 ರಿಂದ 8 ಮಂದಿಯನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಇದೆ.
ಅಕ್ರಮದ ಕುರಿತು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿರುವ ಜಿಲ್ಲಾಧಿಕಾರಿ ಡಾ. ಸುಶೀಲಾ ಬಿ ಅವರು, ”ಖಾಲಿ ಹುದ್ದೆಗಳ ಭರ್ತಿಗಾಗಿ ಇಂದು ಮತ್ತು ನಾಳೆ ಪರೀಕ್ಷೆಯನ್ನು ಆಯೋಜಿಸಲಾಗಿತ್ತು. ಆದರೆ, ಪರೀಕ್ಷೆಯಲ್ಲಿ ಬ್ಲೂಟೂತ್ ಬಳಕೆ ಮಾಡಿರುವ ಬಗ್ಗೆ ಜಿಲ್ಲಾ ಎಸ್‌ಪಿ ಅವರಿಗೆ ಮಾಹಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ಮಾಹಿತಿ ಕಲೆ ಹಾಕಿ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ವೇಳೆ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದವನು ನಕಲಿ ಅಭ್ಯರ್ಥಿ ಎಂದು ದೃಢವಾಗಿದೆ. ಜಿಲ್ಲೆಯ ಸುರಪುರ, ಶಹಾಪುರ ಸೇರಿದಂತೆ 17 ಪರೀಕ್ಷಾ ಕೇಂದ್ರಗಳಲ್ಲಿ ಸುಮಾರು 7884 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಪರೀಕ್ಷಾ ಕೇಂದ್ರದಲ್ಲಿ ಕಟ್ಟುನಿಟ್ಟಿನ ಕ್ರಮ ಇದ್ದರೂ ಬ್ಲೂಟೂತ್ ಬಳಕೆಯಾಗಿದೆ. ಆರೋಪಿ ಅಫಜಲಪುರ ಮೂಲದವನು ಎಂದು ತಿಳಿದು ಬಂದಿದೆ. ಆತನನ್ನು ವಶಕ್ಕೆ ಪಡೆದು ಬ್ಲೂಟೂತ್ ಡಿವೈಸ್, ಮೊಬೈಲ್ ಜಪ್ತಿ ಮಾಡಲಾಗಿದೆ. ಈವರೆಗೆ ಒಟ್ಟು ಮೂವರನ್ನು ವಶಕ್ಕೆ ಪಡೆದು ವಿಚಾರಣೆಯನ್ನು ಮಾಡಲಾಗುತ್ತಿದೆ. ವಿಚಾರಣೆ ನಂತರ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ” ಎಂದರು.