Breaking News

ಬರಲಿದೆ ನೇಮಕಾತಿ ಪರೀಕ್ಷೆ ಅಕ್ರಮ ತಡೆಗೆ ಕಠಿಣ ಕಾಯ್ದೆ; ಅಕ್ರಮ ಎಸಗಿದ್ರೆ ಆಸ್ತಿ ಮುಟ್ಟುಗೋಲು

Spread the love

ಬೆಂಗಳೂರು : ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮ ರಾಜ್ಯ ಸರ್ಕಾರದ ನಿದ್ದೆಗೆಡಿಸುತ್ತಿದೆ.

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಪರೀಕ್ಷೆ ಅಕ್ರಮ ಸಾಕಷ್ಟು ಸದ್ದು ಮಾಡಿತ್ತು. ಸಾಲು ಸಾಲು ನೇಮಕಾತಿ ಪರೀಕ್ಷೆ ಅಕ್ರಮಗಳಿಂದ ಅನೇಕ ಯೋಗ್ಯ ಅಭ್ಯರ್ಥಿಗಳು ಅವಕಾಶ ವಂಚಿತರಾಗುತ್ತಿದ್ದಾರೆ. ನೇಮಕಾತಿ ಪರೀಕ್ಷೆಗಳಲ್ಲಿ ನಡೆಯುವ ಅಕ್ರಮ ತಡೆಯಲು ರಾಜ್ಯ ಸರ್ಕಾರ ಇದೀಗ ಪ್ರತ್ಯೇಕ ಕಾಯ್ದೆ ತರಲು ತೀರ್ಮಾನಿಸಿದೆ. ಅಷ್ಟಕ್ಕೂ ಈ ಉದ್ದೇಶಿತ ಕಾಯ್ದೆಯಲ್ಲಿನ ಕಠಿಣ ನಿಯಮಗಳೇನು? ಎಂಬ ವರದಿ ಇಲ್ಲಿದೆ.

ಪಿಎಸ್​ಐ ನೇಮಕಾತಿ ಪರೀಕ್ಷೆ ಅಕ್ರಮ, ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಕ್ರಮ, ಕೆಇಎ ನೇಮಕಾತಿ ಪರೀಕ್ಷೆ ಅಕ್ರಮ ಹೀಗೆ ಸಾಲು ಸಾಲು ಪರೀಕ್ಷಾ ಅಕ್ರಮಗಳು ಬೆಳಕಿಗೆ ಬರುತ್ತಲೇ ಇವೆ. ನೇಮಕಾತಿ ಪರೀಕ್ಷೆಗಳ ಅಕ್ರಮ ತಡೆಯಲು ಎಷ್ಟೇ ಕಠಿಣ ಕ್ರಮ ಕೈಗೊಂಡರು ಒಂದಲ್ಲಾ ಒಂದು ರೀತಿಯಲ್ಲಿ ಅಕ್ರಮಗಳು ನಡೆಯುತ್ತಲೇ ಇವೆ. ಇಂಥ ಅಕ್ರಮಗಳಿಂದ ಪ್ರಾಮಾಣಿಕ ಅಭ್ಯರ್ಥಿಗಳು ಅವಕಾಶ ವಂಚಿತರಾಗುತ್ತಿದ್ದಾರೆ. ಕಳೆದ ಬಿಜೆಪಿ ಅಧಿಕಾರಾವಧಿಯಲ್ಲಿ ನೇಮಕಾತಿ ಪರೀಕ್ಷೆ ಅಕ್ರಮಗಳು ಸಾಕಷ್ಟು ಸದ್ದು ಮಾಡಿದ್ದವು. ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಹಾಗೂ ಅಭ್ಯರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಈ ನೇಮಕಾತಿ ಪರೀಕ್ಷೆ ಅಕ್ರಮಗಳಲ್ಲಿ ಅಧಿಕಾರಿಗಳು, ರಾಜಕೀಯ ನಾಯಕರುಗಳೇ ಭಾಗಿಯಾಗಿರುವುದು ದುರಂತವಾಗಿದೆ. ಕಾಂಗ್ರೆಸ್ ಸರ್ಕಾರ ಇತ್ತೀಚೆಗೆ ನಡೆಸಿದ ಎಫ್​ಡಿಎ ನೇಮಕಾತಿಗಾಗಿ ಕೆಇಎ ಮೂಲಕ ನಡೆಸಿದ ಪರೀಕ್ಷೆಯಲ್ಲೂ ಅಕ್ರಮ ಬೆಳಕಿಗೆ ಬಂದಿದೆ. ಆ ಮೂಲಕ ಈ ಹಿಂದಿನ ನೇಮಕಾತಿ ಪರೀಕ್ಷೆ ಅಕ್ರಮ ಸಂಬಂಧ ಬಿಜೆಪಿ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಗಂಭೀರವಾಗಿ ತೆಗೆದುಕೊಂಡಿರುವ ಕಾಂಗ್ರೆಸ್ ಸರ್ಕಾರ, ಇದೀಗ ನೇಮಕಾತಿ ಪರೀಕ್ಷೆ ಅಕ್ರಮಗಳನ್ನು ತಡೆಯಲು ಕಠಿಣ ಕಾನೂನು ಜಾರಿಗೆ ತರಲು ಮುಂದಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಪಬ್ಲಿಕ್ ಎಕ್ಸಾಮಿನೇಷನ್ (ನೇಮಕಾತಿಯಲ್ಲಿ ಭ್ರಷ್ಟಾಚಾರ ಮತ್ತು ಅನ್ಯಾಯದ ವಿಧಾನ ತಡೆಗಟ್ಟುವಿಕೆ ಕ್ರಮಗಳು) ವಿಧೇಯಕ 2023ಕ್ಕೆ ಸಚಿವ ಸಂಪುಟ ಸಭೆಯಲ್ಲಿ ಮೊನ್ನೆ ಅನುಮೋದನೆ ನೀಡಲಾಗಿದೆ. ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲಿ ವಿಧೇಯಕ ಮಂಡಿಸಲು ನಿರ್ಧರಿಸಿದೆ. ಒಳಾಡಳಿತ ಇಲಾಖೆ ಕರ್ನಾಟಕ ಪಬ್ಲಿಕ್ ಎಕ್ಸಾಮಿನೇಷನ್ ವಿಧೇಯಕ-2023 ರೂಪಿಸಿದೆ. ಈ ಕಾನೂನಿನಡಿ ಅಕ್ರಮ ಎಸಗಿದವರಿಗೆ ಕಠಿಣ ಶಿಕ್ಷೆ ವಿಧಿಸುವ ನಿಯಮ ರೂಪಿಸಲಾಗಿದೆ. ಅಪರಾಧ ಎಸಗಿದವರಿಗೆ ಶಿಕ್ಷೆ ಪ್ರಮಾಣ, ಶಿಕ್ಷೆಯಿಂದ ಪಾರಾಗದಂತೆ ಕಠಿಣ ನಿಯಮದ ಅಂಶಗಳು ಈ ವಿಧೇಯಕದಲ್ಲಿ ಇದೆ.

ತಪ್ಪಿತಸ್ಥರಿಗೆ ಕಠಿಣ ಜೈಲು ಶಿಕ್ಷೆ ಹಾಗೂ ದಂಡದ ನಿಯಮ : ಕರ್ನಾಟಕ ಪಬ್ಲಿಕ್ ಎಕ್ಸಾಮಿನೇಷನ್ ವಿಧೇಯಕ-2023ರಲ್ಲಿ ಕಠಿಣ ಕಾನೂನುಗಳನ್ನು ರೂಪಿಸಲಾಗಿದೆ. ವಿಧೇಯಕದಲ್ಲಿ ಅಕ್ರಮ ಎಸಗಿದವರ ಮೇಲೆ ಕಠಿಣ ಸೆರೆಮನೆವಾಸ ಹಾಗೂ ಬೃಹತ್ ದಂಡ ವಿಧಿಸುವ ನಿಯಮ ಸೇರಿಸಲಾಗಿದೆ. ಒಂದು ವೇಳೆ ಪರೀಕ್ಷಾರ್ಥಿ ಕಾನೂನುಬಾಹಿರ ಕೃತ್ಯದಲ್ಲಿ ತೊಡಗಿ ಅಕ್ರಮದಲ್ಲಿ ಭಾಗಿಯಾಗಿರುವುದು ದೃಢಪಟ್ಟರೆ, ಅಂಥ ಅಪರಾಧಿಗೆ ಗರಿಷ್ಠ ಐದು ವರ್ಷದವರೆಗೆ ಜೈಲು ಶಿಕ್ಷೆ ವಿಧಿಸುವ ನಿಯಮ ರೂಪಿಸಲಾಗಿದೆ. ಅದರ ಜೊತೆಗೆ ಬೃಹತ್ ಮೊತ್ತದ ದಂಡ ವಿಧಿಸುವ ಅಂಶವನ್ನೂ ಸೇರಿಸಲಾಗಿದೆ. 10 ಲಕ್ಷ ರೂ. ಕಡಿಮೆ ಇಲ್ಲದಂತೆ ದಂಡ ವಿಧಿಸುವ ನಿಯಮ ರೂಪಿಸಲಾಗಿದೆ. ದಂಡ ಕಟ್ಟಲು ವಿಫಲನಾದರೆ 9 ತಿಂಗಳ ಜೈಲು ಶಿಕ್ಷೆ ವಿಧಿಸಲಾಗುವುದು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ