ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4, 2023ರಿಂದ ಡಿಸೆಂಬರ್ 15ರವರೆಗೆ 10 ದಿನಗಳ ಕಾಲ ನಡೆಯುವ ಚಳಿಗಾಲ ಅಧಿವೇಶನಕ್ಕೆ ಪ್ರತಿಯಾಗಿ ಮಹಾಮೇಳಾವ್ ನಡೆಸಲು ಎಂಇಎಸ್ ನಿಂದ ಸಿದ್ಧತೆ ನಡೆಸಿದ್ದು, ಗಡಿ ಜಿಲ್ಲೆಯಲ್ಲಿ ಮತ್ತೆ ಭಾಷಾ ದ್ವೇಷದ ಕಿಡಿ ಹಚ್ಚಲು ಮುಂದಾಗಿದೆ.
ಮರಾಠಾ ಮಂದಿರದಲ್ಲಿ ಸಭೆ ಸೇರಿ ಮಹಾಮೇಳಾವ್ ನಡೆಸಲು ಎಂಇಎಸ್ ತೀರ್ಮಾನ ಕೈಗೊಳ್ಳುವ ಮೂಲಕ ಗಡಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ. ಮಹಾಮೇಳಾವ್ ಯಶಸ್ಸಿಗಾಗಿ ಬೆಳಗಾವಿ ಮತ್ತು ಖಾನಾಪುರದಲ್ಲಿ ಸಮಿತಿ ರಚನೆಗೆ ತಯಾರಿ ನಡೆಸುತ್ತಿದ್ದು, ಈ ವಿಷಯವನ್ನು ಮಹಾರಾಷ್ಟ್ರ ಸರ್ಕಾರ ಮತ್ತು ಅಲ್ಲಿನ ಸಚಿವರ ಗಮನಕ್ಕೆ ತರಲು ನಿರ್ಧರಿಸಿದ್ದಾರೆ. ಅಲ್ಲದೇ ಮಹಾರಾಷ್ಟ್ರದ ನಾಯಕರನ್ನು ಕರ್ನಾಟಕಕ್ಕೆ ಆಹ್ವಾನಿಸಿ ಮತ್ತೊಮ್ಮೆ ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆಯಲು ಮುಂದಾಗಿದೆ.
ಪ್ರತಿ ವರ್ಷ ಬೆಳಗಾವಿಯಲ್ಲಿ ನಡೆಯುವ ಚಳಿಗಾಲ ಅಧಿವೇಶನ ಪ್ರತಿಯಾಗಿ ಎಂಇಎಸ್ ಕಾರ್ಯಕರ್ತರು ಮಹಾಮೇಳಾವ್ ನಡೆಸುತ್ತಾ ಬಂದಿದ್ದಾರೆ. ಕಳೆದ ವರ್ಷ ಮಹಾಮೇಳಾವ್ಗೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿತ್ತು. ಪದೇ ಪದೇ ಗಡಿ ವಿವಾದ ಕೆದಕುತ್ತಿರುವ ಎಂಇಎಸ್ ಕಾರ್ಯಕರ್ತರು ಕನ್ನಡ ಮತ್ತು ಮರಾಠಿ ಜನರ ನಡುವೆ ಭಾಷಾ ಕಿಡಿ ಹೊತ್ತಿಸಲು ಯತ್ನಿಸುತ್ತಿದ್ದಾರೆ. ಮಹಾಮೇಳಾವ್ ನಡೆಸುವ ಎಂಇಎಸ್ ನಿರ್ಧಾರಕ್ಕೆ ಕನ್ನಡಿಗರು ವಿರೋಧ ವ್ಯಕ್ತಪಡಿಸಿದ್ದು, ಅನುಮತಿ ನೀಡದಂತೆ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.