ಬೆಳಗಾವಿ : ಕರ್ನಾಟಕ ರಾಜ್ಯದ ಸಮಸ್ತ ಸ್ವಾತಂತ್ರ್ಯ ಯೋಧರ ಕುಟುಂಬಗಳನ್ನು ಸ್ವಾತಂತ್ರ್ಯ ಹೋರಾಟಗಾರರ ಪರಿವಾರ ಎಂದು ಸರಕಾರ ಘೋಷಣೆ ಮಾಡುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಸ್ವಾತಂತ್ರ್ಯ ಯೋಧರ ಉತ್ತರಾಧಿಕಾರಿಗಳ ಸಂಘದ ಪದಾಧಿಕಾರಿಗಳು ಇಂದು ಬೆಳಗಾವಿಯ ಸುವರ್ಣ ಗಾರ್ಡನ್ ಬಳಿಯ ಟೆಂಟ್ನಲ್ಲಿ ಪ್ರತಿಭಟನೆ ನಡೆಸಿದರು.
ಬಳಿಕ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್ ಸಿ ಮಹಾದೇವಪ್ಪ ಅವರು ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು. ರಾಜ್ಯದ ಸಮಸ್ತ ಸ್ವಾತಂತ್ರ್ಯ ಯೋಧರ ಕುಟುಂಬಗಳ ವಂಶಸ್ಥರಿಗೆ (ಗಂಡು ಹಾಗೂ ಹೆಣ್ಣು ಮಕ್ಕಳಿಗೆ) ಗೌರವ ಧನ ನೀಡಲು ಸರ್ಕಾರ ಆದೇಶ ಹೊರಡಿಸಬೇಕು. ರಾಜ್ಯದ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿ ಕೊಡಬೇಕು.
ಸ್ವಾತಂತ್ರ್ಯ ಯೋಧರು ಮೃತಪಟ್ಟ ವೇಳೆ ಅವರ ಅಂತ್ಯ ಸಂಸ್ಕಾರಕ್ಕೆ ಸರ್ಕಾರ ನೀಡುವ ನಾಲ್ಕು ಸಾವಿರ ರೂಪಾಯಿಯನ್ನು ಹತ್ತು ಸಾವಿರ ರೂಪಾಯಿಗೆ ಹೆಚ್ಚಿಸಬೇಕು. ರಾಜ್ಯದಲ್ಲಿರುವ ಎಲ್ಲ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಉಚಿತ ನಿವೇಶನ ನೀಡುವಂತೆ ಆಗ್ರಹಿಸಿದರು.