ಬೆಳಗಾವಿ: ತಾಲೂಕಿನ ವಂಟಮೂರಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ, ಮೆರವಣಿಗೆ ಮಾಡಿ, ಹಲ್ಲೆಗೈದ ಅಮಾನವೀಯ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿ ಆದೇಶಿಸಿದೆ.
ಈ ಬಗ್ಗೆ ಕಾನೂನು ಸುವ್ಯವಸ್ಥೆ ಎಡಿಜಿಪಿ ಆರ್.ಹಿತೇಂದ್ರ ಸಿಐಡಿ ಡಿಜಿಪಿ ಅವರಿಗೆ ಪತ್ರ ಬರೆದಿದ್ದು, ಸಿಐಡಿ ಅಧಿಕಾರಿಗಳು ಕೈಗೊಳ್ಳುವ ತನಿಖೆಗೆ ಬೆಳಗಾವಿ ನಗರ ಪೊಲೀಸ್ ಆಯುಕ್ತರು ಮಾಹಿತಿ ನೀಡುವಂತೆ ನಿರ್ದೇಶನ ನೀಡಿದ್ದಾರೆ.
ಮಹಿಳೆಯ ಮೇಲಿನ ಅಮಾನವೀಯ ಕೃತ್ಯಕ್ಕೆ ಇಡೀ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಹೈಕೋರ್ಟ್ ಕೂಡ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಬಿಜೆಪಿ ರಾಜ್ಯದ ವಿವಿಧೆಡೆ ಪ್ರತಿಭಟನೆ ನಡೆಸುತ್ತಿದೆ. ರಾಷ್ಟ್ರೀಯ ಮಹಿಳಾ ಆಯೋಗ, ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಹಾಗೂ ಬಿಜೆಪಿಯ ಸತ್ಯಶೋಧನಾ ಸಮಿತಿ ತಂಡದ ಸದಸ್ಯರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸಿಬ್ಬಂದಿ ಭಾನುವಾರ ಬೆಳಗಾವಿಗೆ ಬಂದು ತನಿಖಾಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಆಯೋಗವು ಡಿ.18 ಅಥವಾ 19ರಂದು ಬೆಳಗಾವಿಗೆ ಭೇಟಿ ನೀಡಲಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಈ ಎಲ್ಲ ಬೆಳವಣಿಗೆಗಳು ಮತ್ತು ಪ್ರಕರಣ ಗಂಭೀರವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತನಿಖೆಯನ್ನು ಸಿಐಡಿಗೆ ವಹಿಸಲು ಮುಂದಾಗಿದೆ. ಸೋಮವಾರ ಸಿಐಡಿ ಅಧಿಕಾರಿಗಳು ಪರಿಶೀಲನೆಗೆ ಆಗಮಿಸುವ ಸಾಧ್ಯತೆ ಇದೆ.