ನವದೆಹಲಿ : ಸಿಎಂ ಸಿದ್ದರಾಮಯ್ಯ (CM Siddaramaiah) ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರನ್ನು (PM Narendra modi) ಭೇಟಿಯಾಗಿ ಚರ್ಚೆ ನಡೆಸಿದರು. ಕರ್ನಾಟಕದ ಬರಗಾಲ, ಅನುದಾನ, ಬರ ಪರಿಹಾರ ಮುಂತಾದವುಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಯವರೊಡನೆ ಚರ್ಚಿಸಿದ್ದಾರೆ.
ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18 ಸಾವಿರ ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇದರಲ್ಲಿ 4.6 ಸಾವಿರ ಕೋಟಿ ರೂ. ಇನ್‌ಪುಟ್ ಸಬ್ಸಿಡಿ, 12.7 ಸಾವಿರ ಕೋಟಿ ರೂ. ತುರ್ತು ಪರಿಹಾರ, 5.6 ಸಾವಿರ ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 3.6 ಸಾವಿರ ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ.
ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ವಿವರಿಸಿದರು. ಎನ್.ಡಿ.ಆರ್.ಎಫ್. ನಿಂದ 4663.12 ಕೋಟಿ ರೂ. ಇನ್‌ಪುಟ್ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಲಾಗಿದೆ.
ಕೇಂದ್ರದಿಂದ 18,177 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದ್ದು, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್‌ಪುಟ್ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿಗಳು ಪ್ರಧಾನ ಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟ ಮುಖ್ಯಮಂತ್ರಿಗಳು ರೈತರ ಹಿತರಕ್ಷಣೆಯ ದೃಷ್ಟಿಯಿಂದ ಪರಿಹಾರ ಬಿಡುಗಡೆ ಮಾಡುವಂತೆ ಸಿಎಂ ಕೋರಿದರು.
ಬರ ಪರಿಹಾರದ ಬಗ್ಗೆ ಪ್ರಧಾನಿಯವರಿಗೆ ಮೂರು ಬಾರಿ ಪತ್ರ ಬರೆಯಲಾಗಿದೆ. ಜೊತೆಗೆ ಅವರ ಭೇಟಿಗೆ ಇದುವರೆಗೂ ಹಲವು ಬಾರಿ ಸಮಯಾವಕಾಶ ಕೇಳಲಾಗಿದೆ. ಪ್ರತ್ಯತ್ತರ ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹಲವು ಬಾರಿ ಹೇಳಿಕೆ ನೀಡಿದ್ದರು.