ಬೆಂಗಳೂರು: ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಿಂದ ಮೂವರು ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಯ ಅಗತ್ಯವನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಪಾದಿಸಿದ್ದಾರೆ. ಇವರ ಪ್ರತಿಪಾದನೆಗೆ ಗೃಹ ಸಚಿವ ಜಿ.ಪರಮೇಶ್ವರ ಅವರು ಬೆಂಬಲ ಸೂಚಿಸಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಪರಮೇಶ್ವರ, ಡಿಸಿಎಂ ಹುದ್ದೆ ಸಂಬಂಧಿಸಿ ಸತೀಶ್ ಜಾರಕಿಹೊಳಿ ತಮ್ಮ ಅಭಿಪ್ರಾಯವನ್ನು ಹೈಕಮಾಂಡ್ ಮುಂದೆ ಹೇಳಿದ್ದಾರೆ. ಅದನ್ನು ಪರಿಗಣಿಸೋದು, ಬಿಡೋದು ಹೈಕಮಾಂಡ್ ಗೆ ಬಿಟ್ಟ ವಿಚಾರ. ಅವರ ದೃಷ್ಟಿಯಲ್ಲಿ ಆಯಾ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಹುದ್ದೆ ಕೊಟ್ಟರೆ ಉತ್ತಮ. ಇದರಿಂದ ಲೋಕಸಭಾ ಚುನಾವಣೆಯಲ್ಲಿ ಜನ ಕಾಂಗ್ರೆಸ್ ಕಾಂಗ್ರೆಸ್‌ನತ್ತ ವಾಲಬಹುದು ಎಂಬ ಅಭಿಪ್ರಾಯ ಅವರಲ್ಲಿದೆ ಎಂದು ಹೇಳಿದ್ದಾರೆ.
ಮೂರು ದಿನಗಳ ಹಿಂದಷ್ಟೇ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಸಿಎಂ, ಡಿಸಿಎಂ ಹುದ್ದೆ ನೀಡುವಂತೆ ನಾನೇನೂ ಕೇಳಿಲ್ಲ, ನನಗೆ ಹುದ್ದೆ ನೀಡುವುದು ಬಿಡುವುದು ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬಿಟ್ಟದ್ದು ಎಂದಿದ್ದರು. ನಾನು ದೆಹಲಿಗೆ ಹೋಗಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಿದ್ದು ನಿಜ. ಈ ವೇಳೆ ಯಾವುದೇ ಹುದ್ದೆ ಕೊಡುವಂತೆ ಕೇಳಿಲ್ಲ. ಮುಂಬರುವ ಲೋಕಸಭಾ ಚುನಾವಣೆ ವಿಚಾರವಾಗಿ ಚರ್ಚೆ ಮಾಡಿದ್ದೇವೆ ಅಷ್ಟೇ ಎಂದು ಸ್ಪಷ್ಟಪಡಿಸಿದ್ದರು.