ಬೆಳಗಾವಿ: ಜಗದೀಶ್ ಶೆಟ್ಟರ್ ಬಿಜೆಪಿಗೆ ಸೇರ್ಪಡೆಯಾದ ಬೆನ್ನಲ್ಲೇ ಲಕ್ಷ್ಮಣ ಸವದಿ(Laxman Savadi) ಹೋಗ್ತಾರೆ ಎನ್ನುವ ಚರ್ಚೆ ಮುನ್ನಲೆಗೆ ಬಂದಿದೆ. ಇತ್ತೀಚೆಗೆ ಬಿಜೆಪಿ ನಾಯಕರ ಜೊತೆ ಸವದಿ ಓಡಾಟ ಹೆಚ್ಚಾಗಿದ್ದು, ಇಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಬಿಜೆಪಿ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಜೊತೆಗೆ ಡಿಸಿಸಿ ಬ್ಯಾಂಕ್ ಸಾಮಾನ್ಯ ಸಭೆಗೆ ಬಂದಿದ್ದರು.
ಸಭೆಗೂ ಬರುವ ಮುನ್ನ ಲಕ್ಷ್ಮಣ ಸವದಿ ಮನೆಯಲ್ಲಿ ಗೌಪ್ಯ ಚರ್ಚೆ ಮಾಡಲಾಗಿದೆ ಎನ್ನಲಾಗಿದೆ.
ಡಿಸಿಸಿ ಬ್ಯಾಂಕ್‌ನಲ್ಲಿ ಸಾಮಾನ್ಯ ಸಭೆ ಸಭೆಯಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ, ನಿರ್ದೇಶಕರಾದ ಅಣ್ಣಾಸಾಹೇಬ ಜೊಲ್ಲೆ ಸೇರಿದಂತೆ ಎಲ್ಲ ನಿರ್ದೇಶಕರು ಪಾಲ್ಗೊಂಡಿದ್ದರು. ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೋರ್ಡ್ ಮೀಟಿಂಗ್ ಮಾಡುವ ಸಲುವಾಗಿ ಬಂದಿದ್ದೇವೆ. ವಿಶೇಷತೆ ಏನಿಲ್ಲ ಎಂದರು. ಬಿಜೆಪಿಗೆ ಬರುವ ವಿಚಾರವಾಗಿ ಮಾತನಾಡಿದ ಅವರು, ನಾನು ಕಾಂಗ್ರೆಸ್ ಪಕ್ಷದ ಚಿಹ್ನೆಯ ಮೇಲೆ ಆಯ್ಕೆಯಾಗಿದ್ದೇನೆ. ಕಾಂಗ್ರೆಸ್ ಪಕ್ಷದ ಶಾಸಕನಾಗಿ ಕೆಲಸ ಮಾಡ್ತಿದ್ದೀನಿ. ಅವರು ಎಲ್ಲ ಸಹಜವಾಗಿ ನಡೆಯುವಂತದ್ದು ಎಂದರು. ಯಡಿಯೂರಪ್ಪ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ನನ್ನ ಮನಸ್ಸಿನಲ್ಲಿ ಏನಿದೆ ಎಂದು ಯಾರಿಗೂ ತಿಳಿದುಕೊಳ್ಳಲು ಆಗಲ್ಲ. ಅದು ನನಗೆ ಮತ್ತು ಆ ಭಗವಂತನಿಗೆ ಮಾತ್ರ ಗೊತ್ತು ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ.