ಬೆಳಗಾವಿ: ‘ದೇಶದ ಪ್ರಮುಖ ನಗರಗಳನ್ನು ಸಂಪರ್ಕಿಸುವಂತೆ ಗ್ರೀನ್ ಕಾರಿಡಾರ್ ನಿರ್ಮಿಸುವುದು ನಮ್ಮ ಆದ್ಯತೆ. ಇಂಥ ಹೆದ್ದಾರಿಗಳು ಪ್ರಯಾಣದ ಸಮಯ, ವೆಚ್ಚ ಕಡಿಮೆ ಆಗುವುದಲ್ಲದೇ ಅಭಿವೃದ್ಧಿಗೆ ಪೂರಕವಾಗಿವೆ’ ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದರು.
ನಗರದಲ್ಲಿ ಗುರುವಾರ ವಿವಿಧ ರಾಷ್ಟ್ರೀಯ ಹೆದ್ದಾರಿಗಳ ಉದ್ಘಾಟನೆ ಹಾಗೂ 18 ಹೊಸ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ‘ಕರ್ನಾಟಕ ರಾಜ್ಯ ಅತ್ಯಂತ ಸಂಪದ್ಭರಿತವಾಗಿದೆ. ಹೀಗಾಗಿ, ಕೇಂದ್ರವು ಇಲ್ಲಿನ ರಾಷ್ಟ್ರೀಯ ಹೆದ್ದಾರಿಗಳಿಗೆ ಹೆಚ್ಚು ಆದ್ಯತೆ ನೀಡಿದೆ. ರಾಜ್ಯದಲ್ಲಿ 8,200 ಕಿ.ಮೀ ಉದ್ದದ ರಾಷ್ಟ್ರೀಯ ಹೆದ್ದಾರಿ ಇದೆ. ಇದನ್ನು ₹3 ಲಕ್ಷ ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಉದ್ದೇಶಿಸಲಾಗಿದೆ. ಈಗಾಗಲೇ ಶೇ 90ರಷ್ಟು ಕಾಮಗಾರಿಗಳು ಮುಗಿದಿವೆ’ ಎಂದರು.
ಬೆಳಗಾವಿ- ಹುನಗುಂದ- ರಾಯಚೂರು ಮಾರ್ಗದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಿಸಲಾಗುತ್ತಿದೆ. ಇದರ ಅಂದಾಜು ವೆಚ್ಚವೇ ₹9,000 ಕೋಟಿ. ಈ ಕಾಮಹಾರಿ ಪೂರ್ಣಗೊಂಡರೆ ಬೆಳಗಾವಿ- ರಾಯಚೂರು ಮಧ್ಯದ ಪ್ರಯಾಣದ ಅವಧಿ ಮೂರೂವರೆ ತಾಸು ಕಡಿಮೆ ಆಗಲಿದೆ’ ಎಂದರು.