ತುಮಕೂರು: ನಡೆದಾಡುವ ದೇವರೆಂದೇ ಖ್ಯಾತರಾಗಿದ್ದ ಸಿದ್ಧಗಂಗಾ ಮಠದ ತ್ರಿವಿಧ ದಾಸೋಹಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 117ನೇ ಜಯಂತಿ ಮತ್ತು ಗುರುವಂದನಾ ಕಾರ್ಯಕ್ರಮ ಏಪ್ರಿಲ್ 1ರಂದು ಸಿದ್ಧಗಂಗಾ ಮಠದಲ್ಲಿ ನಡೆಯಲಿದೆ.
ಮಠದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಪತಂಜಲಿ ಯೋಗ ಪೀಠದ ಬಾಬಾ ರಾಮದೇವ್ ಉದ್ಘಾಟಿಸಲಿದ್ದಾರೆ.
ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ. ಡಾ. ಅನ್ನದಾನೇಶ್ವರ ಸ್ವಾಮೀಜಿ, ಧಾರವಾಡ ಮುರುಘಾ ಮಠದ ಡಾ. ಮಲ್ಲಿಕಾರ್ಜುನ ಸ್ವಾಮೀಜಿ, ಗದಗದ ಶ್ರೀ ಬೀರೇಶ್ವರ ಪುಣ್ಯಾಶ್ರಮದ ಅಧ್ಯಕ್ಷ ಶ್ರೀ ಕಲ್ಲಯ್ಯ ಅಜ್ಜನವರು, ಸಿದ್ದಗಂಗಾ ಮಠದ ಉತ್ತರಾಧಿಕಾರಿ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ ಭಾಗವಹಿಸಲಿದ್ದಾರೆ.
ಭಕ್ತರಿಗೆ 6 ಕಡೆ ದಾಸೋಹ ವ್ಯವಸ್ಥೆ ಮಾಡಲಾಗಿದೆ. ಒಂದೇ ಬಾರಿಗೆ 30,000 ಮಂದಿ ಭಕ್ತರು ಕುಳಿತು ಊಟ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದ್ದು, ಬೆಳಗ್ಗೆಯಿಂದ ರಾತ್ರಿಯವರೆಗೂ ದಾಸೋಹ ನಡೆಯಲಿದೆ. 8 ಗಂಟೆಗೆ ಶ್ರೀಗಳ ಪ್ರತಿಮೆ ಉತ್ಸವ ನಡೆಯಲಿದೆ.