ಶಿವಮೊಗ್ಗ: ಜಿಲ್ಲೆಯ ಪ್ರತಿಷ್ಠಿತ ಕಾರ್ಖಾನೆಗಳಲ್ಲಿ ಒಂದಾಗಿದ್ದ ಭದ್ರಾವತಿಯ ಮೈಸೂರು ಕಾಗದ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯ ಸಭೆಯಲ್ಲಿ ಇಂದು ಮಹತ್ವದ ನಿರ್ಧಾರ ಕೈಗೊಳ್ಳಲಾಯಿತು.
ಈ ಸಂಬಂಧ ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದ್ದ ಅರಣ್ಯ ಮತ್ತು ಕೈಗಾರಿಕಾ ಇಲಾಖೆ ಸೇರಿದಂತೆ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸ್ಥಗಿತಗೊಂಡಿದ್ದ ಎಂ.ಪಿ.ಎಂ ಕಾಗದ ಕಾರ್ಖಾನೆಯನ್ನು ಪುನರಾರಂಭಿಸಲು ರೂಪುರೇಷೆಗಳನ್ನು ಸಿದ್ಧಪಡಿಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಇರುವ ಅರಣ್ಯ ಸಂಪತ್ತನ್ನು ಬಳಸಿಕೊಂಡು ಕಾರ್ಖಾನೆಯನ್ನು ಸುಸ್ಥಿತಿಯಲ್ಲಿ ಮುಂದುವರಿಸಿಕೊಂಡು ಹೋಗುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮುಖ್ಯಮಂತ್ರಿ ಅವರ ಮಹತ್ವದ ಈ ನಿರ್ಣಯದಿಂದಾಗಿ ಜಿಲ್ಲೆಯ ಜನರಲ್ಲಿ ಹರ್ಷೋತ್ಸಾಹ ಮೂಡಿದೆ. ಇತ್ತೀಚಿನ ಕೆಲವು ವರ್ಷಗಳಿಂದ ಹಲವು ಸಮಸ್ಯೆಗಳಿಂದ ರೋಗಗ್ರಸ್ಥವಾಗಿದ್ದ ಕಾರ್ಖಾನೆಯು ಸ್ಥಗಿತಗೊಂಡಿದ್ದರಿಂದ ಸಹಸ್ರಾರು ನೌಕರರ ಜೀವನ ನಿರ್ವಹಣೆ ಕಷ್ಟಕರವಾಗಿತ್ತು. ಅಸಂಖ್ಯಾತ ನೌಕರರು ಕುಟುಂಬದ ನಿರ್ವಹಣೆಗಾಗಿ ಕೆಲಸವನ್ನರಸಿ ಊರು ತೊರೆದಿದ್ದರೆ ಮತ್ತೆ ಕೆಲವರು ಸರ್ಕಾರದ ವಿವಿಧ ಇಲಾಖೆಗಳಲ್ಲಿ ಎರವಲು ಸೇವೆ ಸಲ್ಲಿಸುತ್ತಿದ್ದಾರೆ. ಮಾತ್ರವಲ್ಲ ಕಾರ್ಖಾನೆಯ ಯಂತ್ರಗಳು ತುಕ್ಕು ಹಿಡಿಯುವಂತಾಗಿತ್ತು. ಈ ಕಾರ್ಖಾನೆಯನ್ನು ಪುನರಾರಂಭಿಸುವ ಸಂಬಂಧ ಸಂಸದ ಬಿ.ವೈ.ರಾಘವೇಂದ್ರ ಅವರು ಮಾನ್ಯಮುಖ್ಯಮಂತ್ರಿಗಳ ಗಮನ ಸೆಳೆದು ಒತ್ತಾಯಿಸಿದ್ದರು.
ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಅರಣ್ಯ ಇಲಾಖೆಯ ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಸಂದೀಪ್ ದವೆ, ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ ಗುಪ್ತಾ, ಪಿಸಿಸಿಎಫ್ ಸಂಜಯ್ ಮೋಹನ್, ಆರ್ಥಿಕ ಇಲಾಖೆಯ ಕಾರ್ಯದರ್ಶಿ ಏಕರೂಪಕೌರ್ ಮುಂತಾದವರು ಉಪಸ್ಥಿತರಿದ್ದರು.