ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಪುತ್ರಿ ನೇಹಾ ಹಿರೇಮಠ ಕೊಲೆ ಪ್ರಕರಣ ಮರೆಯುವ ಮುನ್ನವೇ ಮತ್ತೋರ್ವ ಯುವತಿಯನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ವೀರಾಪುರ ಓಣಿಯ ಯುವತಿ ಅಂಜಲಿ ಅಂಬಿಗೇರ ( Anjali Ambiger ) ಎಂಬ ಯುವತಿಯನ್ನು ವಿಶ್ವ ಎಂಬ ಯುವಕ ಬುಧವಾರ ಬೆಳಗ್ಗೆ 5.30ಕ್ಕೆ ಮನೆಗೆ ನುಗ್ಗಿ ಚಾಕುವಿನಿಂದ ಇರಿದಿದ್ದಾನೆ. ಮನೆಯವರು ತಡೆಯಲು ಮುಂದಾದರೂ ಬಿಡದೆ ಹತ್ಯೆ ಮಾಡಿ ಪರಾರಿಯಾಗಿದ್ದಾನೆ.
ಈ ಹಿಂದೆ ಮೈಸೂರಿಗೆ ಬಾ ಎಂದು ಅಂಜಲಿಗೆ ವಿಶ್ವ ಧಮ್ಕಿ ಹಾಕಿದ್ದ. ಅಕಸ್ಮಾತ್ ನೀನು ನನ್ನ ಜೊತೆ ಬರದೆ ಹೋದರೆ ನಿರಂಜನ ಹಿರೇಮಠ ಮಗಳಿಗೆ ಆದ ಹಾಗೆಯೇ ನಿನಗೂ ಮಾಡುತ್ತೇನೆ ಎಂದು ಧಮ್ಕಿ ಹಾಕಿದ್ದ. ಈತನ ವಿರುದ್ಧ ಹಲವು ಕಳ್ಳತನ ಪ್ರಕರಣಗಳಲ್ಲಿ ಶಾಮೀಲಾದ ಆರೋಪವೂ ಇದೆ.
ಆರೋಪಿ ವಿಶ್ವ ಅಂಜಲಿಗೆ ಧಮ್ಕಿ ಹಾಕಿರುವ ವಿಚಾರವಾಗಿ ಆಕೆಯ ಅಜ್ಜಿ ಗಂಗಮ್ಮ ಪೊಲೀಸರ ಗಮನಕ್ಕೆ ತಂದಿದ್ದರು. ಆದರೆ, ಅಜ್ಜಿಯ ಮಾತಿಗೆ ಹೆಚ್ಚು ಪ್ರಾಶಸ್ತ್ಯ ನೀಡದ ಪೊಲೀಸರು, ಇದೆಲ್ಲ ಮೂಢನಂಬಿಕೆ ಎಂದು ಹೇಳಿ ಕಳುಹಿಸಿದ್ದರು. ಪರಿಣಾಮವಾಗಿ ಇದೀಗ ಮತ್ತೊಂದು ಕೊಲೆಯಾಗಿದೆ.
Laxmi News 24×7