Breaking News

ರಂಗೇರಿದ ರಾಜ್ಯಸಭೆ ಚುನಾವಣೆ : ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Spread the love

ಬೆಂಗಳೂರು, ಜೂ.9- ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುತ್ತಿರುವ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸುವುದರೊಂದಿಗೆ ಚುನಾವಣಾ ಕಾವು ರಂಗೇರಿದೆ.

ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಬಿಜೆಪಿ ಅಭ್ಯರ್ಥಿಯಾಗಿ ಅಶೋಕ್ ಗಸ್ತಿ ಮತ್ತು ಈರಣ್ಣ ಕಡಾಡಿ ಅವರು ರಾಜ್ಯಸಭೆ ಚುನಾವಣಾ ಅಧಿಕಾರಿಯೂ ಆಗಿರುವ ಎಂ.ಕೆ.ವಿಶಾಲಾಕ್ಷಿ ಅವರಿಗೆ ತಮ್ಮ ತಮ್ಮ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿರುವ ಇಂದು ಯಾವುದೇ ಇತರೆ ಅಭ್ಯರ್ಥಿ ಕೊನೆಗಳಿಗೆಯಲ್ಲಿ ನಾಮಪತ್ರ ಸಲ್ಲಿಸದಿದ್ದರೆ ಕಾಂಗ್ರೆಸ್ , ಜೆಡಿಎಸ್ ಹಾಗೂ ಬಿಜೆಪಿಯ ಅಧಿಕೃತ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ಚುನಾವಣಾ ಕಣದಲ್ಲಿ ಉಳಿಯುವ ಕಾಂಗ್ರೆಸ್‍ನ ಎಂ.ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್‍ನ ಎಚ್.ಡಿ.ದೇವೇಗೌಡರು, ಬಿಜೆಪಿಯ ಅಶೋಕ್ ಗಸ್ತಿ, ಮತ್ತು ಈರಣ್ಣ ಕಡಾಡಿ ಅವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ.

ನಾಮಪತ್ರ ಸಲ್ಲಿಸಲು ಇಂದು ಕೊನೆಯವಾಗಿದೆ. ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಜೂ.12ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಅಗತ್ಯಬಿದ್ದರೆ ಜೂನ್ 19ರಂದು ಮತದಾನ ನಡೆದು ಅಂದೇ ಫಲಿತಾಂಶ ಪ್ರಕಟಗೊಳ್ಳಲಿದೆ.

ಈಗಿನ ಪರಿಸ್ಥಿತಿಯನ್ನು ಅವಲೋಕಿಸಿದರೆ ಕಣದಲ್ಲಿರುವ ಮೂರು ಪಕ್ಷಗಳ ಅಭ್ಯರ್ಥಿಗಳು ವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ. ಒಂದು ವೇಳೆ ಚುನಾವಣೆ ನಡೆದಿದ್ದೇ ಆದರೆ ಪ್ರತಿ ಅಭ್ಯರ್ಥಿಯೂ ಗೆಲ್ಲಲು 48 ಮತಗಳನ್ನು ಪಡೆಯಬೇಕಾಗಿದೆ.

ಆಡಳಿತಾರೂಢ ಬಿಜೆಪಿ 115 ಸದಸ್ಯರನ್ನು ಹೊಂದಿದೆ. ಇಬ್ಬರು ಅಭ್ಯರ್ಥಿಗಳು ಗೆಲ್ಲಲು 96 ಮರಗಳ ಅಗತ್ಯವಿದ್ದು, ಇನ್ನು ಹೆಚ್ಚುವರಿಯಾಗಿ 19 ಮತಗಳು ಉಳಿಯುತ್ತವೆ. ಕಾಂಗ್ರೆಸ್ ವಿಧಾನಸಭೆಯಲ್ಲಿ 68 ಸದಸ್ಯರನ್ನು ಹೊಂದಿದ್ದು, ಹೆಚ್ಚುವರಿಯಾಗಿ 20 ಮತಗಳು ಉಳಿಯಲಿವೆ. ಈ ಮತಗಳನ್ನು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ದೇವೇಗೌಡರಿಗೆ ಚಲಾಯಿಸುವ ಸಾಧ್ಯತೆಗಳಿವೆ.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಗೌಡರಿಗೆ ಬೆಂಬಲ ಸೂಚಿಸಿರುವುದರಿಂದ ಕಾಂಗ್ರೆಸ್ ಹೆಚ್ಚುವರಿ ಮತಗಳು ಜೆಡಿಎಸ್‍ಗೆ ಬೀಳಲಿವೆ.  34 ಸದಸ್ಯರನ್ನು ಹೊಂದಿರುವ ಜೆಡಿಎಸ್‍ಗೆ ಗೆಲ್ಲಲು 14 ಮತಗಳ ಕೊರತೆ ಎದುರಾಗಲಿದೆ. ಕಾಂಗ್ರೆಸ್ ಬೆಂಬಲ ಸೂಚಿಸಿರುವುದರಿಂದ ಗೌಡರ ಹಾದಿಯೂ ಸುಗಮವಾಗಲಿದೆ.

ಇಂದು ಬೆಳಗ್ಗೆ ಬಿಜೆಪಿ ಅಭ್ಯರ್ಥಿಗಳಾದ ಅಶೋಕ್ ಗಸ್ತಿ ಮತ್ತು ಈರಣ್ಣ ಕಡಾಡಿ ಅವರು ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಗೆ ಆಗಮಿಸಿದರು. ರಾಜ್ಯ ಘಟಕದ ಅಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅಭ್ಯರ್ಥಿಗಳಿಗೆ ಶುಭ ಕೋರಿದರು.

ಬಿಜೆಪಿ ಅಭ್ಯರ್ಥಿಗಳಾದ ಅಶೋಕ್ ಗಸ್ತಿ, ಈರಣ್ಣ ಕಡಾಡಿ ಅವರ ಜೊತೆ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಅಶ್ವಥ್‍ನಾರಾಯಣ, ವಿ.ಸೋಮಣ್ಣ, ಆರ್.ಅಶೋಕ್, ಕೆ.ಗೋಪಾಲಯ್ಯ, ಜೆ.ಸಿ.ಮಾಧುಸ್ವಾಮಿ ವಿಧಾನಸಭೆ ಮುಖ್ಯ ಸಚೇತಕ ವಿ.ಸುನೀಲ್‍ಕುಮಾರ್ ಸೇರಿದಂತೆ ಮತ್ತಿತರರು ಆಗಮಿಸಿ ಚುನಾವಣಾ ಅಧಿಕಾರಿಯೂ ಆಗಿರುವ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು.

ದೇವೇಗೌಡರು ನಾಮಪತ್ರ ಸಲ್ಲಿಸುವಾಗ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಮಾಜಿ ಸಚಿವ ಎಚ್.ಡಿ.ರೇವಣ್ಣ ಸೇರಿದಂತೆ ಪಕ್ಷದ ಶಾಸಕರು, ಮುಖಂಡರು ಉಪಸ್ಥಿತರಿದ್ದರು.  ನಿನ್ನೆಯಷ್ಟೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದರು.


Spread the love

About Laxminews 24x7

Check Also

ಬಿಪಿಎಲ್ ಕಾರ್ಡುದಾರರಿಗೆ ಗುಡ್​ನ್ಯೂಸ್! ಕಾರ್ಡ್ ಮರುಸ್ಥಾಪನೆ ಕಾರ್ಯ ಬಹುತೇಕ ಪೂರ್ಣ, ಡಿಸೆಂಬರ್​ನಿಂದ ಸಿಗಲಿದೆ ರೇಷನ್

Spread the loveಬಿಪಿಎಲ್ ಕಾರ್ಡುದಾರರಿಗೆ ಗುಡ್​ನ್ಯೂಸ್! ಕಾರ್ಡ್ ಮರುಸ್ಥಾಪನೆ ಕಾರ್ಯ ಬಹುತೇಕ ಪೂರ್ಣ, ಡಿಸೆಂಬರ್​ನಿಂದ ಸಿಗಲಿದೆ ರೇಷನ್ ಬೆಂಗಳೂರು, ನವೆಂಬರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ