ಯಲಬುರ್ಗಾ: ‘ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಉತ್ತಮ ಆಡಳಿತ ನಡೆಸುತ್ತಿರುವುದನ್ನು ಮೆಚ್ಚಿಕೊಂಡು ರಾಜ್ಯದ ಜನ ಬೆಂಬಲಿಸಿದ್ದರಿಂದ 9 ಸ್ಥಾನಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಗಿದೆ’ ಎಂದು ಸಿಎಂ ಆರ್ಥಿಕ ಸಲಹೆಗಾರ, ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ನಿರೀಕ್ಷೆಯಂತೆ ಫಲಿತಾಂಶ ಪ್ರಕಟಗೊಂಡಿದೆ. ಇನ್ನೆರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಬೇಕಿತ್ತು. ಆದರೆ ಸಾಧ್ಯವಾಗಿಲ್ಲ. ಮುಖ್ಯವಾಗಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಮಹತ್ತರ ಸಾಧನೆಯಾಗಿದೆ. ಇದಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರ ಕೊಡುಗೆಯೇ ಮುಖ್ಯ ಕಾರಣ. ಅದಕ್ಕಾಗಿಯೇ ಹೆಚ್ಚಿನ ಸ್ಥಾನಗಳು ಬರಲು ಸಾಧ್ಯವಾಗಿದೆ ಎಂದರು.