ಬೆಂಗಳೂರು, ಜೂನ್ 10: 5 ಜಿಲ್ಲೆಗಳಲ್ಲಿ ವಾಡಿಕೆ ಮಳೆಯಾದರೆ, 4 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ (Rain) ಆಗಿದೆ. ಆ ಮೂಲಕ ರಾಜ್ಯದಲ್ಲಿ ವಾಡಿಕೆಗಿಂತ ಶೇಕಡಾ 78ರಷ್ಟು ಹೆಚ್ಚುವರಿ ಮಳೆಯಾಗಿದೆ ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ(Krishna Byre Gowda)ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವರ್ಷದ ಮುಂಗಾರು ಪರಿಸ್ಥಿತಿಯ ಬಗ್ಗೆ ಪರಿಶೀಲನೆ ಮಾಡಿದ್ದೇವೆ. ಜೂ.2ರಂದು ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದೆ. ಹೀಗಾಗಿ ಮುಂದಿನ 15 ದಿನದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಡಿಮೆ ಆಗಲಿದೆ ಎಂದು ಹೇಳಿದ್ದಾರೆ.
ಬರ ಪರಿಹಾರ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಬರ ಪರಿಹಾರವನ್ನು ಸುಪ್ರೀಂ ಕೋರ್ಟ್ಗೆ ಹೋಗಿ ಪಡೆದುಕೊಂಡು ಬಂದಿದ್ದೇವೆ. ಮೇ ಮೊದಲ ವಾರ 27.5 ಲಕ್ಷ ರೈತರಿಗೆ ಬರ ಪರಿಹಾರ ನೀಡಿದ್ದೇವೆ. 7 ಲಕ್ಷ ರೈತರು ಹೊಸದಾಗಿ ಮಳೆಯಾಶ್ರಿತ ಬೆಳೆ ಹೊಂದಿದ್ದರು. ನೀರು ಬರದೆ ಬೆಳೆಹಾನಿ ಆದ ರೈತರಿಗೆ ಪರಿಹಾರ ಕೊಡಲು ತೀರ್ಮಾನ ಮಾಡಿದ್ದೇವೆ ಎಂದರು.