ಕಲಬುರಗಿ: ‘ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ಎದುರಿಸಲು ಜೆಡಿಎಸ್ ಪಕ್ಷದ ಕಾರ್ಯಕರ್ತರು ಬೂತ್ ಮಟ್ಟದಿಂದ ಸಿದ್ಧರಾಗಬೇಕು’ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಬಾಲರಾಜ್ ಗುತ್ತೇದಾರ ಹೇಳಿದರು.
ನಗರದ ಜೆಡಿಎಸ್ ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ, ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರ ಆಡಳಿತದ ಅವಧಿಯಲ್ಲಿ ರೈತರ ಸಾಲಮನ್ನಾ, ಗ್ರಾಮ ವಾಸ್ತವ್ಯ, ನೀರಾವರಿ ಯೋಜನೆ ಸೇರಿದಂತೆ ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದಾರೆ.
ಪಕ್ಷದ ಕಾರ್ಯಕ್ರಮಗಳ ಬಗ್ಗೆ ಜನರಿಗೆ ತಿಳಿಹೇಳುವ ಮೂಲಕ ಬೂತ್ ಮಟ್ಟದಿಂದ ಪಕ್ಷವನ್ನು ಸಂಘಟಿಸಬೇಕು’ ಎಂದು ಹೇಳಿದರು.
ಇದೇ ವೇಳೆ ಮುಂಬರುವ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆ, ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ, ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಗೆ ಸಂಬಂಧಿಸಿದ ಎಲ್ಲ ವಿಧಾನಸಭೆ ಮತಕ್ಷೇತ್ರದಲ್ಲಿ ಎನ್‌ಡಿಎ ಪಕ್ಷದ ಅಭ್ಯರ್ಥಿ ಪಡೆದ ಮತಗಳಿಕೆ, ಪಕ್ಷವನ್ನು ಸಂಘಟಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.