ಬೆಳಗಾವಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ದೇಶದಲ್ಲಿ ತುರ್ತುಪರಿಸ್ಥಿತಿ ಘೋಷಿಸಿದ ದಿನವನ್ನು ವಿರೋಧಿಸಿ, ಕಾಂಗ್ರೆಸ್ ಕ್ಷಮೆ ಕೋರುವಂತೆ ಆಗ್ರಹಿಸಿ ಕಚೇರಿಗೆ ಭಿತ್ತಿ ಪತ್ರ ಅಂಟಿಸಲು ಹೊರಟ್ಟಿದ್ದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಶಾಸಕ ಅಭಯ ಪಾಟೀಲ ಸೇರಿದಂತೆ ಅನೇಕ ನಾಯಕರನ್ನು ಪೊಲೀಸರು ಹೊತ್ತುಕೊಂಡು ಪೊಲೀಸ್ ವಾಹನದಲ್ಲಿ ಎತ್ತಿ ಹಾಕಿದರು.
ಸಂವಿಧಾನವನ್ನು ಬಿಜೆಪಿ ಬದಲಿಸಲಿದೆ ಎಂದು ಕಾಂಗ್ರೆಸ್ ನಾಯಕರು ಸುಳ್ಳು ಹೇಳುತಿದ್ದಾರೆ. ಈ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಕ್ಷಮಾಪಣೆ ಕೇಳಬೇಕೆಂದು ಬಿಜೆಪಿ ನಾಯಕರು ಆಗ್ರಹಿಸಿದರು.
ನಗರದ ಪ್ರವಾಸಿ ಮಂದಿರದಿಂದ ಕಾಂಗ್ರೆಸ್ ಭವನದವರೆಗೆ ಬಿಜೆಪಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ರಾಹುಲ್ ಗಾಂಧಿ ದೇಶವಾಸಿಗಳಲ್ಲಿ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಕಚೇರಿಗೆ ಫೋಸ್ಟರ್ ಅಂಟಿಸಲು ತೆರಳುವಾಗ ಬಿಜೆಪಿ ಉಪಾಧ್ಯಕ್ಷ ಅನಿಲ್ ಬೆನಕೆ, ಶಾಸಕ ಅಭಯ ಪಾಟೀಲ, ಮಾಜಿ ಶಾಸಕರಾದ ಮಹಾಂತೇಶ ದೊಡ್ಡಗೌಡರ, ಸಂಜಯ ಪಾಟೀಲ ಸೇರಿದಂತೆ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಯಿತು.