ಖಾನಾಪುರ: ಖಾನಾಪೂರದ ಕಾಡಂಚಿನ 15 ಗ್ರಾಮಗಳ ಜನರ ಸ್ಥಳಾಂತರಕ್ಕೆ ಚಿಂತನೆ ನಡೆಸಲಾಗಿದೆ ಎಂದು ಶುಕ್ರವಾರ ಮಲಪ್ರಭಾ ಪ್ರವಾಹ ಪರಿಶೀಲನೆ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.
ತಾಲೂಕಿನ ಕಾಡಂಚಿನ 15 ಗ್ರಾಮಗಳನ್ನು ಪಟ್ಟಿ ಮಾಡಲಾಗಿದ್ದು, ಅವರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು.
ಇಲ್ಲವೇ ಅಲ್ಲಿನ ಜನರನ್ನು ಸ್ಥಳಾಂತರಿಸುವ ಕುರಿತು ಯೋಚಿಸಲಾಗುವುದು. ಹೊಸ ರಸ್ತೆ ನಿರ್ಮಿಸಲು ಅರಣ್ಯ ಇಲಾಖೆಯಿಂದ ಅನುಮತಿಯಿಲ್ಲ. ನೂರಾರು ವರ್ಷಗಳಿಂದ ಜನರು ಅಂತಹ ಪ್ರದೇಶದಲ್ಲಿ ವಾಸವಿದ್ದಾರೆ. ಈ ಕುರಿತು ಈಗಾಗಲೇ ಅರಣ್ಯ ಸಚಿವರು ಹಾಗೂ ಸ್ಥಳೀಯ ಶಾಸಕರೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಸಲಾಗಿದೆ. ಅರಣ್ಯ ಸಚಿವರಿಗೆ ಇಲ್ಲಿನ ಸ್ಥಳೀಯ ಸ್ಥಿತಿಗತಿಗಳ ಬಗ್ಗೆ ವಿವರಿಸಲಾಗುವುದು ಎಂದು ಸಚಿವ ಹೇಳಿದ್ದಾರೆ.
ಇತ್ತೀಚೆಗೆ ಕಾಡಂಚಿನ ಅಮಗಾಂವ ಗ್ರಾಮದ ಮಹಿಳೆ ಆರೋಗ್ಯ ಸಮಸ್ಯೆಯಿಂದ ಸಾವನ್ನಪ್ಪಿರುವ ಪ್ರಕರಣಕದ ಬಗ್ಗೆ ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆಯಲಾಗಿದೆ. ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಸೇರಿಸಲು ವಾಹನ ವ್ಯವಸ್ಥೆ, ಆಯಂಬುಲೆನ್ಸ್ ಹೋಗಲು ಸರಿಯಾದ ರಸ್ತೆ ಇಲ್ಲ, ನೆಟವರ್ಕ್ ಸಮಸ್ಯೆ ಇದೆ. ಶೇ.80ರಷ್ಟು ಜನರು ಒಪ್ಪಿದರೆ ಅವರನ್ನು ಬೇರೆಡೆ ಸ್ಥಳಾಂತರ ಮಾಡಬಹುದು ಎಂದು ಸ್ಪಷ್ಟನೆ ನೀಡಿದರು.
ಖಾನಾಪುರದ ಹಲವು ಹಳೆಯ ಸೇತುವೆಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಖಾನಾಪುರದಿಂದ ಗೋವಾ ರಾಜ್ಯದ ಗಡಿಯವರೆಗೂ ರಾಷ್ಟ್ರೀಯ ಹೆದ್ದಾರಿ ರಸ್ತೆ ದುರಸ್ಥಿ ಮತ್ತು ಸೇತುವೆಗಳ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿದೆ. ಮಳೆಗಾಲ ಮುಗಿದ ಬಳಿಕ ಹೊಸ ಸೇತುವೆ ನಿರ್ಮಾಣಕ್ಕೆ ಕ್ರಮವಹಿಸಲಾಗುವದು .ಜಿಲ್ಲೆಯಲ್ಲಿ ಪ್ರವಾಹ ಅಷ್ಟೊಂದು ಅಪಾಯಕಾರಿ ಮಟ್ಟದಲ್ಲಿಲ್ಲ. ಸದ್ಯದ ಪ್ರವಾಹ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹೇಳಿದರು.