ಬೆಂಗಳೂರು: ಚುನಾವಣೆಯಲ್ಲಿ ಅಕ್ರಮ ಎಸಗುವ ಮೂಲಕ ಜಯಶಾಲಿಯಾಗಿದ್ದಾರೆಂದು ಆರೋಪಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ದಾವಣಗೆರೆ ಲೋಕಸಭಾ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಪ್ರಭಾ ಮಲ್ಲಿಕಾರ್ಜುನ್ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಪರಾಜಿತ ಅಭ್ಯರ್ಥಿ ಜಿ.ಎಸ್.
ಗಾಯಿತ್ರಿ ಸಿದ್ದೇಶ್ವರ್ ಹಾಗೂ ದಾವಣಗೆರೆ ನಿವಾಸಿ ಸುಭಾನ್ ಖಾನ್ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯು ನ್ಯಾಯಮೂರ್ತಿ ಎಂ.ಐ. ಅರುಣ್ ಅವರ ಏಕಸದಸ್ಯ ನ್ಯಾಯಪೀಠದ ಮಂಗಳವಾರ ವಿಚಾರಣೆಗೆ ನಡೆಸಿತು.
ವಾದ ಆಲಿಸಿದ ನ್ಯಾಯಪೀಠ, ಪ್ರಭಾ ಮಲ್ಲಿಕಾರ್ಜುನ್ ಸೇರಿ ದಾವಣಗೆರೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಹಾಗೂ ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ, ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಸೆ.19ಕ್ಕೆ ಮುಂದೂಡಿತು.
ಪ್ರಭಾ ಮಲ್ಲಿಕಾರ್ಜುನ್ ಅವರು ಗ್ಯಾರಂಟಿ ಕಾರ್ಡ್ ವಿತರಿಸಿ ಮತದಾರರಿಗೆ ಆಮಿಷವೊಡ್ಡಿರುವುದಲ್ಲದೆ, ಮಹಿಳೆಯರಿಗೆ 1 ಲಕ್ಷ ಕೊಡುವುದಾಗಿ ಭರವಸೆ ನೀಡಿದ್ದರು. ಇದು ಪ್ರಜಾಪ್ರತಿನಿಧಿ ಕಾಯ್ದೆಗೆ ವಿರುದ್ಧವಾಗಿದ್ದು, ಮತದಾರರಿಗೆ ಲಂಚದ ಆಮಿಷ ಒಡ್ಡಿದ್ದಾರೆ ಮತ್ತು ಚುನಾವಣಾ ಅಕ್ರಮಗಳನ್ನು ನಡೆಸಿ ಆಯ್ಕೆಯಾಗಿದ್ದಾರೆ. ಆದ್ದರಿಂದ ಅವರ ಆಯ್ಕೆಯನ್ನು ಅಸಿಂಧುವೆಂದು ಘೋಷಿಸಲು ಅರ್ಜಿದಾರರು ಮನವಿ ಮಾಡಿದ್ದಾರೆ.
Laxmi News 24×7