ಆರೋಗ್ಯ ವಿಮೆ, ಮಾಸಾಶನ ಹೆಚ್ಚಳಕ್ಕೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ
ಬೆಂಗಳೂರು: ಹಿರಿಯ ನಾಗರಿಕರ ಜೀವನಾನುಭವ, ಅವರ ಸಹನೆ, ಸಾಮರ್ಥ್ಯ ನಮ್ಮೆಲ್ಲರಿಗೂ ಪ್ರೇರಣದಾಯಕ. ಹಿರಿಯ ನಾಗರಿಕರು ಅಶಕ್ತರಲ್ಲ; ಸಶಕ್ತರು. ಹಿರಿಯರನ್ನು ಗೌರವಿಸುವುದು; ಪೋಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಹಿರಿಯ ನಾಗರಿಕರಿಗಾಗಿ ಆರೋಗ್ಯ ವಿಮೆ ಯೋಜನೆಯನ್ನು ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯ ವತಿಯಿಂದ ಆಯೋಜಿಸಲಾಗಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ರಾಜ್ಯ ಸರ್ಕಾರ ಹಿರಿಯ ನಾಗರಿಕರ ಸಬಲೀಕರಣಕ್ಕಾಗಿ, ಅವರ ಅಭ್ಯುದಯಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ಹಿರಿಯ ನಾಗರಿಕರ ಮಾಸಾಶನ ಹೆಚ್ಚಳ ಮಾಡುವ ಬಗ್ಗೆ ಬೇಡಿಕೆ ಇದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದರು.
ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಹಿರಿಯ ನಾಗರಿಕರಿಗೆ ಅನುಕೂಲವಾಗುತ್ತಿದೆ. ಶಕ್ತಿ ಯೋಜನೆಯಡಿ ನಮ್ಮ ಹಿರಿಯ ತಾಯಿಂದಿರರು ಕೂಡ ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾರೆ, ಇದು ಸಂತಸದ ಸಂಗತಿ ಎಂದರು.
ರಾಜ್ಯದಲ್ಲಿ ಸದ್ಯ 57 ಲಕ್ಷದ 91 ಸಾವಿರ ಹಿರಿಯ ನಾಗರಿಕರಿದ್ದಾರೆ. ಇಲಾಖೆಗೆ 2024 -25ನೇ ಸಾಲಿನಲ್ಲಿ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿಗಾಗಿ ಸರ್ಕಾರ 10 ಕೋಟಿ 47 ಲಕ್ಷ ರೂಪಾಯಿ ಅನುದಾನ ನಿಗದಿಪಡಿಸಿದೆ. ರಾಜ್ಯದಲ್ಲಿ ಅಶಕ್ತ ಮತ್ತು ನಿರ್ಗತಿಕ ಹಿರಿಯ ನಾಗರಿಕರಿಗಾಗಿ ಸ್ವಯಂಸೇವಾ ಸಂಸ್ಥೆಗಳ ಮೂಲಕ ರಾಜ್ಯದೆಲ್ಲೆಡೆ 63 ವೃದ್ಧಾಶ್ರಮಗಳನ್ನು ತೆರೆದಿದೆ. ಸದ್ಯ 1 ಸಾವಿರದ 575 ಮಂದಿ ಅಶಕ್ತ ಹಿರಿಯ ನಾಗರಿಕರು ಆಶ್ರಯ ಪಡೆದಿದ್ದಾರೆ. ಕೇಂದ್ರ ಸರ್ಕಾರದಿಂದಲೂ ನಡೆಸುತ್ತಿರುವ ವೃದ್ಧಾಶ್ರಯಗಳಲ್ಲೂ ಹಿರಿಯ ನಾಗರಿಕರಿದ್ದಾರೆ. ಇನ್ನೂ 19 ವೃದ್ಧಾಶ್ರಮಗಳನ್ನು ತೆರೆಯುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ತಿಳಿಸಿದರು.