ಬೆಳಗಾವಿ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಯುವಕನಿಗೆ ಇಲ್ಲಿನ ಪೋಕ್ಸೊ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ಮತ್ತು ₹10 ಸಾವಿರ ದಂಡ ವಿಧಿಸಿ ಬುಧವಾರ ತೀರ್ಪು ನೀಡಿದೆ.
ಇಲ್ಲಿನ ರುಕ್ಮಿಣಿ ನಗರದ ನಿವಾಸಿ ಚಂದ್ರು ಮೋಹನ ಹರಿಜನ (26) ಶಿಕ್ಷೆಗೆ ಒಳಗಾದವ.
ಮದುವೆ ಆಗುವುದಾಗಿ ನಂಬಿಸಿ, 2019ರ ಜನವರಿ 14ರಂದು ಬಾಲಕಿ ಒಡವೆಗಳನ್ನು ಬ್ಯಾಂಕಿನಲ್ಲಿ ಒತ್ತೆ ಇರಿಸಿ ಹಣ ಪಡೆದಿದ್ದ.
ನಂತರ ಮಹಾರಾಷ್ಟ್ರದ ಕೊಲ್ಹಾಪುರಕ್ಕೆ ಅಪಹರಿಸಿಕೊಂಡು ಹೋಗಿ, ನಿರಂತರವಾಗಿ ಅತ್ಯಾಚಾರ ಎಸಗಿದ್ದ. ಈ ಸಂಬಂಧ ಬಾಲಕಿ ಪೋಷಕರು ಮಾಳಮಾರುತಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖಾಧಿಕಾರಿ ಬಿ.ಆರ್.ಗಡ್ಡೇಕರ ಅವರು, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸಿ.ಎಂ. ಪುಷ್ಪಲತಾ ಅವರು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ತೀರ್ಪು ಪ್ರಕಟಿಸಿದರು. ಸಂತ್ರಸ್ತೆಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ ₹1 ಲಕ್ಷ ಪರಿಹಾರ ಪಡೆಯುವಂತೆ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್.ವಿ.ಪಾಟೀಲ ವಾದ ಮಂಡಿಸಿದ್ದರು.