ಬೆಳಗಾವಿ: ಜಿಲ್ಲೆಯ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ರೂಪಿಸಿದ ‘ಸಿಇಟಿ- ಸಕ್ಷಮ’ಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಗ್ರಾಮೀಣ, ಬಡ ವಿದ್ಯಾರ್ಥಿಗಳು ಕೂಡ ಸಿಇಟಿ-ನೀಟ್‌ಗಳಲ್ಲಿ ಉತ್ತಮ ರ್‍ಯಾಂಕ್ ಗಳಿಸಲು ಈ ವಿನೂತನ ಪ್ರಯೋಗ ಮಾಡಲಾಗಿದೆ.
ಇದರಿಂದ ಜಿಲ್ಲೆಯ 6,063 ವಿದ್ಯಾರ್ಥಿಗಳಲ್ಲಿ ಭರವಸೆ ಮೂಡಿದೆ.
ಪ್ರಥಮ ಹಾಗೂ ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್ ತರಬೇತಿ ನೀಡುವುದು, ಪ್ರತಿ ತಿಂಗಳು ಮಾದರಿ ಪರೀಕ್ಷೆ ನಡೆಸುವುದು ಇದರ ಉದ್ದೇಶ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಮಾದರಿಯಲ್ಲೇ ಈ ಸಿದ್ಧತಾ ಪರೀಕ್ಷೆ ತೆಗೆದುಕೊಳ್ಳಲಾಗುತ್ತದೆ. ವಿದ್ಯಾರ್ಥಿಗಳಲ್ಲಿನ ಭಯ, ಗೊಂದಲ ನಿವಾರಣೆಗೂ ಇದು ಸಹಕಾರಿ.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಇದರ ರೂವಾರಿ. ಪದವಿಪೂರ್ವ ಶಿಕ್ಷಣ ಇಲಾಖೆಯ ಸಹಯೋಗವಿದೆ. ಬೆಳಗಾವಿ ಶೈಕ್ಷಣಿಕ ಜಿಲ್ಲೆಯ 19 ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 15 ವಿಜ್ಞಾನ ಕಾಲೇಜುಗಳ ಸೇರಿ ಎಲ್ಲ 34 ಕಾಲೇಜುಗಳಲ್ಲಿ ಶೇ 100ರಷ್ಟು ಹಾಜರಾತಿ ಕಂಡುಬಂದಿದೆ.
ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳ ಎರಡನೇ ಶನಿವಾರ, ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ನಾಲ್ಕನೇ ಶನಿವಾರ ಸಿದ್ಧತಾ ಪರೀಕ್ಷೆ ನಡೆಯುತ್ತವೆ. ಆಗಸ್ಟ್ 24ರಿಂದ ಈ ಪ್ರಕ್ರಿಯೆ ನಡೆಯುತ್ತಿದ್ದು, ಈವರೆಗೆ ನಾಲ್ಕು ಪರೀಕ್ಷೆಗಳು ಯಶಸ್ವಿಯಾಗಿವೆ.
Laxmi News 24×7