ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಗುರಿಯಾಗಿದ್ದಳೆನ್ನಲಾದ ಮಹಿಳೆಯ ಅಪಹರಣ ಆರೋಪ ಸಂಬಂಧ ಕೆ.ಆರ್. ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನಿನ ಷರತ್ತುಗಳನ್ನು ಹೈಕೋರ್ಟ್ ಸಡಿಲಿಸಿದೆ. ಮೈಸೂರು ಮತ್ತು ಹಾಸನ ಪ್ರವಾಸ ಮಾಡುವುದಕ್ಕಾಗಿ 15 ದಿನಗಳ ಕಾಲಾವಕಾಶ ನೀಡಲಾಗಿದೆ.
ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಷರತ್ತುಗಳನ್ನು ಸಡಿಲ ಮಾಡಿ ಆದೇಶಿಸಿದೆ. ಭವಾನಿ ರೇವಣ್ಣ ಅವರಿಗೆ ಈ ಹಿಂದೆ ನಿರೀಕ್ಷಣಾ ಜಾಮೀನು ಕುರಿತಂತೆ ಅರ್ಜಿಯ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ”ಭವಾನಿ ರೇವಣ್ಣ ಅವರು ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಮಾಸ್ಟರ್ ಮೈಂಡ್ ಆಗಿದ್ದಾರೆ. ಇದೇ ಕಾರಣದಿಂದ ಜಾಮೀನು ಮಂಜೂರು ಮಾಡುವ ಸಂದರ್ಭದಲ್ಲಿ, ಮೈಸೂರು ಜಿಲ್ಲೆಯ ಕೆ.ಆರ್. ನಗರ ಮತ್ತು ಹಾಸನ ಜಿಲ್ಲೆಗಳಿಗೆ ಪ್ರವಾಸ ಮಾಡದಂತೆ ನಿರ್ಬಂಧ ವಿಧಿಸಿ ಆದೇಶಿಸಿತ್ತು. ಆದ್ದರಿಂದ ಜಾಮೀನು ಷರತ್ತುಗಳನ್ನು ಸಡಿಲಿಸಬಾರದು” ಎಂದು ಕೋರಿದ್ದರು.
ವಾದ ಆಲಿಸಿದ ಪೀಠ, ಭವಾನಿ ರೇವಣ್ಣನ ಜಾಮೀನು ಷರತ್ತುಗಳನ್ನು ಸಡಿಲಗೊಳಿಸಿ ಮೈಸೂರು ಮತ್ತು ಹಾಸನ ಪ್ರವೇಶಕ್ಕೆ ಅವಕಾಶ ಕಲ್ಪಿಸಿತು. ಅಲ್ಲದೆ, ನಿರೀಕ್ಷಣಾ ಜಾಮೀನು ಮಂಜೂರು ಮಾಡುವ ಸಂದರ್ಭದಲ್ಲಿ ವಿಧಿಸಿರುವ ಇತರ ಷರತ್ತುಗಳನ್ನು ಉಲ್ಲಂಘಿಸಬಾರದು ಎಂದು ತಿಳಿಸಿ ವಿಚಾರಣೆ ಮುಂದೂಡಿತು.