ಚಿಕ್ಕಮಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಆರೋಪದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ಪೊಲೀಸರು ಬಂಧಿಸಿದ್ದು, ಕೋರ್ಟ್ಗೆ ಹಾಜರುಪಡಿಸಿದ್ದಾರೆ.
ಈ ಮಧ್ಯೆ ಬಂಧನ ಅವರ ತವರು ಜಿಲ್ಲೆ ಚಿಕ್ಕಮಗಳೂರಿನಲ್ಲಿಂದು ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಿನ್ನೆ ಸಂಜೆಯಿಂದಲೂ ಪ್ರತಿಭಟನೆಯ ಕಾವು ಜೋರಾಗಿದ್ದು, ಇಂದು ಚಿಕ್ಕಮಗಳೂರು ನಗರ ಸಂಪೂರ್ಣ ಬಂದ್ ಮಾಡಲಾಗಿದೆ.
ನಿನ್ನೆ ರಾತ್ರಿ ಚಿಕ್ಕಮಗಳೂರು ನಗರದಲ್ಲಿ ಪ್ರತಿಭಟಿಸಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು ಮಾಡಲಾಗಿದ್ದು, ಇಂದು 80-100 ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬಿಎನ್‌ಎಸ್ ಕಲಂ 143, 247, 199, 191, 126 (2), 324 (4) ಅಡಿ ಪ್ರಕರಣ ದಾಖಲಿಸಲಾಗಿದೆ. ಅನುಮತಿ ಪಡೆಯದೆ ಪ್ರತಿಭಟನೆ, ದೊಂಬಿ, ಗಲಾಟೆ, ಅಕ್ರಮ ಕೂಟ, ರಸ್ತೆ ತಡೆ, ಸಾರ್ವಜನಿಕರ ಆಸ್ತಿ ನಷ್ಟ, ಟೈರಿಗೆ ಬೆಂಕಿ, ಬಸ್ಗೆ ಕಲ್ಲು ತೂರಾಟ ಕುರಿತಂತೆ ಕೇಸ್ ಹಾಕಲಾಗಿದೆ.