ಬೆಂಗಳೂರು: ಬಾಣಂತಿಯರ ಸಾವನ್ನು ತಡೆಯಲು ವಿಫಲವಾದ ಸಚಿವರಾದ ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳ್ಕರ್ ಅವರು ರಾಜೀನಾಮೆ ಕೊಡಬೇಕೆಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾದ ಅಧ್ಯಕ್ಷೆ ಮಂಜುಳಾ ಅವರು ಆಗ್ರಹಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಬಾಣಂತಿಯರ ಸಾವನ್ನು ತಡೆಯುವುದರಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ. ಅವರು ರಾಜೀನಾಮೆ ಕೊಟ್ಟು ಮನೆಗೆ ವಾಪಸ್ ಹೋಗಬೇಕು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇಲ್ಲಿವರೆಗೆ ಬಾಣಂತಿ ಸಾವಿನ ಸಂಬಂಧ ಒಬ್ಬರನ್ನೂ ಭೇಟಿ ಮಾಡಿ ಸಾಂತ್ವನ ಹೇಳಿಲ್ಲ. ಅವರು ಕೂಡ ರಾಜೀನಾಮೆ ಕೊಟ್ಟು ಮನೆಗೆ ವಾಪಸ್ ಹೋಗಬೇಕು” ಎಂದು ಆಗ್ರಹಿಸಿದರು.
“ಬಾಣಂತಿಯರ ಸಾವನ್ನು ಸರ್ಕಾರ ನಿಲ್ಲಿಸದೇ ಇರುವುದನ್ನು ಖಂಡಿಸಿ ಇಡೀ ರಾಜ್ಯದಲ್ಲಿ, ಪ್ರತಿದಿನ 5 ಜಿಲ್ಲೆಗಳಲ್ಲಿ ರಾಜ್ಯ ಮಹಿಳಾ ಮೋರ್ಚಾ ಜಿಲ್ಲಾ ಘಟಕಗಳು ನಾಳೆಯಿಂದ ಪ್ರತಿಭಟನೆ ನಡೆಸಲಿವೆ. ಇದೊಂದು ಲಜ್ಜೆಗೆಟ್ಟ ಸರ್ಕಾರ. ಇಲ್ಲಿನವರೆಗೆ ಯಾವುದೇ ಸಚಿವರು ತೆರಳಿ ಭೇಟಿ ಮಾಡುತ್ತಿಲ್ಲ” ಎಂದು ಕಿಡಿಕಾರಿದರು.
Laxmi News 24×7