ಬೆಳಗಾವಿ: ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಪೂರೈಕೆ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.
ಬೆಳಗಾವಿಯಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಿಎಂ ಚೆನ್ನಾಗಿ ಸರ್ಕಾರ ನಡೆಸುತ್ತಿದ್ದಾರೆ. ಹಾಗಾಗಿ, ಅವರ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಗ್ಯಾರಂಟಿ ಸೇರಿದಂತೆ ಒಳ್ಳೆಯ ಕಾರ್ಯಕ್ರಮಗಳನ್ನು ಕೊಟ್ಟಿದ್ದೇವೆ. ಮುಂದೆ ಬಜೆಟ್ ಇದೆ, ಒಳ್ಳೆಯ ಬಜೆಟ್ ಅನ್ನು ಮುಖ್ಯಮಂತ್ರಿಗಳು ನೀಡಲಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ, ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದರು.ಮುಂದಿನ ಸಿಎಂ ಡಿಕೆಶಿ ಎಂಬ ಘೋಷಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರು ಈಗಾಗಲೇ ಕೆಪಿಸಿಸಿ ಅಧ್ಯಕ್ಷರಾಗಿ ಹಾಗೂ ಡಿಸಿಎಂ ಆಗಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ, ಆ ಪ್ರಶ್ನೆ ಈಗ ನಮ್ಮ ಮುಂದೆ ಇಲ್ಲ ಎಂದು ಹೇಳಿದರು.