ಶಿವಮೊಗ್ಗ: ನಗರದ ಆದಿಚುಂಚನಗಿರಿ ಶಾಲೆಯಲ್ಲಿ ನಡೆದ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಬ್ರಾಹ್ಮಣ ಮಹಾಸಭಾ ನೀಡಿರುವ ದೂರಿನ ಅನ್ವಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಜನಿವಾರ ತೆಗೆಸಿದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಶಿವಮೊಗ್ಗ ಜಿಲ್ಲಾ ಬ್ರಾಹ್ಮಣ ಮಹಾಸಭಾ ದೂರು ನೀಡಿತ್ತು. ಏಪ್ರಿಲ್ 16ರಂದು ನಡೆದಿದ್ದ ಸಿಇಟಿ ಪರೀಕ್ಷೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ತೆಗೆಸಲಾಗಿದೆ ಎಂದು ಆರೋಪಿಸಲಾಗಿದೆ. ಪರೀಕ್ಷಾ ವಿಚಾರದಲ್ಲಿ ಜನಿವಾರ ತೆಗೆಸಬೇಕೆಂಬ ನಿಯಮವಿಲ್ಲ. ಆದರೂ ಕಾಲೇಜಿನ ಸೆಕ್ಯೂರಿಟಿಯವರು ಜನಿವಾರ ತೆಗಿಸಿ ಬ್ರಾಹ್ಮಣ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ ಎಂದು ಬ್ರಾಹ್ಮಣ ಸಭಾ ತನ್ನ ದೂರಿನಲ್ಲಿ ಆರೋಪಿಸಿದೆ.
ದೂರು ಸ್ವೀಕರಿಸಿ ಪ್ರಕರಣ ದಾಖಲಿಸಿದ ಪೊಲೀಸರು: ಸಿಇಟಿ ಪರೀಕ್ಷೆಯ ಸೆಕ್ಯೂರಿಟಿ ನೋಡಿಕೊಳ್ಳುತ್ತಿರುವ ಅಧಿಕಾರಿ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ನಟರಾಜ್ ಭಾಗವತ್ ಅವರು ಶುಕ್ರವಾರ ರಾತ್ರಿ ನೀಡಿದ ದೂರಿನಲ್ಲಿ ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ ರಾತ್ರಿಯೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Laxmi News 24×7