ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಯ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ: ಮೇ 15 ರಿಂದ ವರ್ಗಾವಣೆ, ಷರತ್ತುಗಳೇನು?
ಬೆಂಗಳೂರು: ರಾಜ್ಯ ಸರ್ಕಾರ 2025-26ನೇ ಸಾಲಿನ ಸಾರ್ವತ್ರಿಕ ವರ್ಗಾವಣೆಯ ಮಾರ್ಗಸೂಚಿ ಹೊರಡಿಸಿದೆ. ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳಿಗೆ ಮಾಡಲಾಗುವ ವರ್ಗಾವಣೆಗಳ ಸಂಖ್ಯೆ ಆಯಾ ವೃಂದಗಳ ಕಾರ್ಯನಿರತ ವೃಂದ ಬಲದ ಶೇ.6ನ್ನು ಮೀರದಂತೆ 15.05.2025 ರಿಂದ 14.06.2025 ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ತೀರ್ಮಾನಿಸಲಾಗಿದೆ.
ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ನೌಕರರಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪ್ರಾಧಿಕಾರಗಳಿಗೆ ಅಧಿಕಾರ ನೀಡಲಾಗಿದೆ. ಯಾವುದೇ ಸರ್ಕಾರಿ ನೌಕರರ ವರ್ಗಾವಣೆಯಾದ ಸಂದರ್ಭಗಳಲ್ಲಿ ಯಾವುದೇ ನೌಕರರು ಸ್ಥಳ ನಿಯುಕ್ತಿಗಾಗಿ ಕಾಯದಂತೆ ಕಡ್ಡಾಯವಾಗಿ ಸ್ಥಳ ನಿಯುಕ್ತಿ ಮಾಡಬೇಕು.
ಯಾವುದೇ ಸರ್ಕಾರಿ ನೌಕರನ ವಿರುದ್ಧ ಗಂಭೀರ ಸ್ವರೂಪದ ಆರೋಪಗಳಿದ್ದು, ಇಲಾಖಾ ವಿಚಾರಣೆ / ಕ್ರಿಮಿನಲ್ ನಡವಳಿ ಪ್ರಾರಂಭಿಸಿದ್ದಲ್ಲಿ ಅಥವಾ ಬಾಕಿಯಿದ್ದಲ್ಲಿ ಅಂತಹವರನ್ನು ತನಿಖೆ / ಇಲಾಖಾ ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡಬಹುದಾದ ಹುದ್ದೆಗಳಿಗೆ ನೇಮಿಸದೇ ಆಡಳಿತಾತ್ಮಕ ಅನುಕೂಲಕ್ಕೆ Non-Executive ಹುದ್ದೆಗಳಿಗೆ ನೇಮಿಸಬೇಕು. ಜೊತೆಗೆ ಇಲಾಖಾ ವಿಚಾರಣೆ /ಕ್ರಿಮಿನಲ್ ಮೊಕದ್ದಮೆ ಬಾಕಿಯಿರುವ ಸರ್ಕಾರಿ ನೌಕರರನ್ನು ಅವರು ಕೋರುವ ಹುದ್ದೆಗೆ ಸ್ಥಳನಿಯುಕ್ತಿಗೊಳಿಸಬಾರದು ಎಂದು ತಿಳಿಸಲಾಗಿದೆ.
ಒಂದು ಸ್ಥಳದಲ್ಲಿರಬಹುದಾದ ಕನಿಷ್ಠ ಅವಧಿ: ಒಂದು ಸ್ಥಳದಲ್ಲಿ ಈ ಕೆಳಗೆ ಸೂಚಿಸಿರುವ ಸೇವಾವಧಿಯನ್ನು ಪೂರ್ಣಗೊಳಿಸದ ಯಾವುದೇ ಸರ್ಕಾರಿ ನೌಕರನನ್ನು ಸಾಧಾರಣವಾಗಿ ವರ್ಗಾವಣೆ ಮಾಡುವಂತಿಲ್ಲ. ಎಲ್ಲ ಗುಂಪು ಎ ಹುದ್ದೆಗಳು 2 ವರ್ಷ, ಎಲ್ಲ ಗುಂಪು-ಬಿ ಹುದ್ದೆಗಳು 2 ವರ್ಷ, ಎಲ್ಲ ಗುಂಪು-ಸಿ ಹುದ್ದೆಗಳು 4 ವರ್ಷ, ಎಲ್ಲ ಗುಂಪು-ಡಿ ಹುದ್ದೆಗಳು 7 ವರ್ಷ ಪೂರೈಸದ ನೌಕರರನ್ನು ವರ್ಗಾವಣೆ ಮಾಡುವಂತಿಲ್ಲ.
ತಮ್ಮ ಇಲಾಖೆಯ ವ್ಯಾಪ್ತಿಯಡಿ ಬರುವ ಇಲಾಖೆಗಳ ಒಂದು ನಿರ್ದಿಷ್ಟವಾದ ಹುದ್ದೆಯ ಕಾರ್ಯ ಸ್ವರೂಪದ / ಸೂಕ್ಷ್ಮತೆಯ ಆಧಾರದ ಮೇಲೆ ಒಂದು ಹುದ್ದೆಯಲ್ಲಿ ಸರ್ಕಾರಿ ನೌಕರನು ಸೇವೆ ಸಲ್ಲಿಸಬಹುದಾದ ಕನಿಷ್ಠ ಅವಧಿಯನ್ನು ಸಚಿವಾಲಯದ ಆಡಳಿತ ಇಲಾಖೆಗಳು ಮುಖ್ಯಮಂತ್ರಿಯವರ ಪೂರ್ವಾನುಮೋದನೆಯೊಂದಿಗೆ ಕಾಲಕಾಲಕ್ಕೆ ಪರಿಷ್ಕರಿಸಿ/ನಿಗದಿಪಡಿಸಿ ಆದೇಶ ಹೊರಡಿಸಬಹುದು.
ಇಲಾಖಾ ಮುಖ್ಯಸ್ಥರು ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತಹ ವರ್ಗಾವಣೆ ಪ್ರಸ್ತಾವನೆಗಳನ್ನು ಸಚಿವಾಲಯದ ಆಡಳಿತ ಇಲಾಖೆಗಳ ಮೂಲಕವೇ ಸಚಿವರಿಗೆ ಸಲ್ಲಿಸಬೇಕು. ಹೈದರಾಬಾದ್-ಕರ್ನಾಟಕ ಪ್ರದೇಶದಲ್ಲಿ ನೆಲೆಸಿರುವ ಕಚೇರಿಗಳಿಗೆ ಸ್ಥಳೀಯ ವೃಂದ ಮತ್ತು ಮಿಕ್ಕುಳಿದ ವೃಂದಗಳಲ್ಲಿನ ವಿವಿಧ ವೃಂದದ ಹುದ್ದೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ ನೇಮಕಾತಿ ಹೊಂದಿರುವ ನೌಕರರನ್ನು ಅವರ ನೇಮಕಾತಿ ದಿನಾಂಕದಿಂದ ಕನಿಷ್ಠ 10 ವರ್ಷಗಳವರೆಗೂ ಹೈದರಾಬಾದ್-ಕರ್ನಾಟಕ ಪ್ರದೇಶ ಹೊರತುಪಡಿಸಿ ವರ್ಗಾವಣೆ ಮಾಡಬಾರದು.
ಕನಿಷ್ಠ ಸೇವಾವಧಿ ವಿಸ್ತರಣೆ/ಕಡಿತಗೊಳಿಸುವ ಪ್ರಕರಣಗಳು:
- ಒಂದು ಸ್ಥಳದಲ್ಲಿರಬಹುದಾದ ಕನಿಷ್ಠ ಅವಧಿಯನ್ನು ಪೂರ್ಣಗೊಳಿಸಿ ವರ್ಗಾವಣೆಗೆ ಅರ್ಹನಿರುವ ಸರ್ಕಾರಿ ನೌಕರನಿಗೆ ನಿವೃತ್ತನಾಗಲು ಎರಡು ವರ್ಷಕ್ಕಿಂತ ಕಡಿಮೆ ಸೇವಾವಧಿ ಇದ್ದಲ್ಲಿ..
- ಒಬ್ಬ ಸರ್ಕಾರಿ ನೌಕರನು ವಿಶೇಷ ತಾಂತ್ರಿಕ ವಿದ್ಯಾರ್ಹತೆ ಅಥವಾ ಅನುಭವ ಹೊಂದಿದ್ದು, ಅಂತಹ ನಿರ್ದಿಷ್ಟವಾದ ಹುದ್ದೆಗೆ ತಕ್ಷಣಕ್ಕೆ ನೇಮಿಸಲು ಸೂಕ್ತವಾದ ಬದಲಿ ನೌಕರರು ಲಭ್ಯವಿಲ್ಲದಿದ್ದಲ್ಲಿ..
- ಕೇಂದ್ರ ಸರ್ಕಾರದ ಯೋಜನೆ ಅಥವಾ ಫ್ಲ್ಯಾಗ್ಶಿಪ್ ಯೋಜನೆಗಳಲ್ಲಿ ಒಬ್ಬ ಸರ್ಕಾರಿ ನೌಕರನು ಕೆಲಸ ಮಾಡುತ್ತಿದ್ದು, ಆ ಯೋಜನೆಯ ಅನುಷ್ಠಾನಗೊಳಿಸುವಿಕೆ ಪ್ರಮುಖ ಹಂತದಲ್ಲಿರುವಾಗ ಆತನ ಸೇವೆಯನ್ನು ಹಿಂಪಡೆದಲ್ಲಿ ಸಕಾಲದಲ್ಲಿ ಆ ಯೋಜನೆಯ ಪೂರ್ಣಗೊಳ್ಳುವಿಕೆಯು ಗಂಭೀರವಾಗಿ ನಿಲ್ಲುವ ಸಂಭವವಿದ್ದಲ್ಲಿ..
- ಪತಿ-ಪತ್ನಿಯರಿಬ್ಬರೂ ಸರ್ಕಾರಿ ನೌಕರರಾಗಿದ್ದು, ಇವರಲ್ಲಿ ಒಬ್ಬರು ವರ್ಗಾವಣೆಗೊಂಡಲ್ಲಿ ಆಗ ಇನ್ನೊಬ್ಬರು ಹಾಲಿಯಿರುವ ಸ್ಥಳದಲ್ಲಿ ಕನಿಷ್ಠ ಸೇವಾವಧಿಯನ್ನು ಪೂರೈಸದಿದ್ದರೂ ಖಾಲಿ ಹುದ್ದೆಯ ಲಭ್ಯತೆಗೊಳಪಟ್ಟು ಆ ಸ್ಥಳಕ್ಕೆ ಅಥವಾ ಹತ್ತಿರವಿರುವ ಸ್ಥಳಕ್ಕೆ ವರ್ಗಾಯಿಸಲು..
- ಒಂದು ವೇಳೆ ಸರ್ಕಾರಿ ನೌಕರನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಯಾಗಿದ್ದಲ್ಲಿ ಪದಾಧಿಕಾರದ ಅವಧಿ ಮುಗಿಯುವವರೆಗೆ ವರ್ಗಾಯಿಸಬಾರದು. ಒಂದು ವೇಳೆ ಪದಾಧಿಕಾರದ ಅವಧಿ ಮುಗಿದ ನಂತರ 3 ತಿಂಗಳಲ್ಲಿ ಚುನಾವಣೆಗಳು ನಡೆಯದಿದ್ದಲ್ಲಿ ಅಂತಹವರನ್ನು ವರ್ಗಾಯಿಸಬಹುದು. ಒಂದು ವೇಳೆ ಅವರು ಮರು ಚುನಾಯಿತನಾದಲ್ಲಿ 2ನೇ ಅವಧಿಯವರೆಗೆ ಮಾತ್ರ ಆತನನ್ನು ಮುಂದುವರೆಸಬಹುದು.
- ಸರ್ಕಾರಿ ನೌಕರ ಅಥವಾ ಆತನ / ಆಕೆಯ ಅಥವಾ ಮಕ್ಕಳು ಯಾವುದೇ ಗಂಭೀರ ಅಥವಾ ಮಾರಕ ಕಾಯಿಲೆಗಳಿಂದ ಬಳಲುತ್ತಿದ್ದಲ್ಲಿ ಒಂದು ಸ್ಥಳದಲ್ಲಿ ಆ ವೈದ್ಯಕೀಯ ಚಿಕಿತ್ಸಾ ಸೌಲಭ್ಯವು ಲಭ್ಯವಿದ್ದು, ಈ ಬಗ್ಗೆ ವೈದ್ಯಕೀಯ ಮಂಡಳಿಯಿಂದ ಪ್ರಮಾಣ ಪತ್ರ ಪಡೆದಲ್ಲಿ..
- ಮಹಿಳಾ ಸರ್ಕಾರಿ ನೌಕರರು ವಿಧವೆ / ಅವಿವಾಹಿತೆ / ವಿಚ್ಛೇದನ ಪಡೆದ ಅವಿವಾಹಿತೆಯಾದಲ್ಲಿ, ಖಾಲಿ ಹುದ್ದೆಯ ಲಭ್ಯತೆಗೊಳಪಟ್ಟು ಆಕೆಯು ಕೋರಿದ ಅಥವಾ ಹತ್ತಿರದ ಯಾವುದಾದರೂ ಸ್ಥಳಕ್ಕೆ ವರ್ಗಾಯಿಸಬಹುದು.
Laxmi News 24×7