Breaking News

ರಾಜ್ಯದಲ್ಲಿ ನಿಯಂತ್ರಣಕ್ಕೆ ಬಾರದ ಬಾಲ್ಯ ವಿವಾಹ ಸಿಎಂ ತವರು ಜಿಲ್ಲೆ ಮೈಸೂರಲ್ಲಿ ಅತೀ ಹೆಚ್ಚು ದೂರು:

Spread the love

ಬೆಂಗಳೂರು: ಪ್ರಗತಿಶೀಲ ರಾಜ್ಯವಾದ ಕರ್ನಾಟಕದಲ್ಲಿ ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿ ಪ್ರಕರಣಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಅದೆಷ್ಟೇ ಜಾಗೃತಿ ಮೂಡಿಸಿ, ಕಠಿಣ ಕ್ರಮಗಳನ್ನು ಕೈಗೊಂಡರೂ ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿಯರ ಸಂಖ್ಯೆ ಮಾತ್ರ ಹೆಚ್ಚುತ್ತಲೇ ಇದೆ.

ಕರ್ನಾಟಕ ಶೈಕ್ಷಣಿಕ, ಸಾಮಾಜಿಕ, ತಂತ್ರಜ್ಞಾನಗಳಲ್ಲಿ ಆಧುನಿಕತೆಯನ್ನು ಮೈಗೂಡಿಸಿಕೊಂಡು ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಜ್ಯ. ಆದರೂ ಕೂಡ ಬಾಲ್ಯ ವಿವಾಹದ ಪಿಡುಗು ಇನ್ನೂ ಮುಂದುವರೆದಿದೆ. ಅದರ ಜೊತೆಗೆ ಬಾಲ ಗರ್ಭಿಣಿಯರ ಸಂಖ್ಯೆಯೂ ಹೆಚ್ಚುತ್ತಿದೆ. ರಾಜ್ಯದ ಎಲ್ಲಾ ಸರ್ಕಾರಗಳು ಈ ಸಂಬಂಧ ಕಠಿಣ ಕಾನೂನು ಪಾಲನೆ ಮಾಡುತ್ತಿದ್ದರೂ ಬಾಲ್ಯ ವಿವಾಹಕ್ಕೆ ಕಡಿವಾಣ ಹಾಕಲು ಸಾಧ್ಯವಾಗಿಲ್ಲ. ಜನಜಾಗೃತಿ ಜೊತೆಗೆ ಹಲವು ಕಾರ್ಯಕ್ರಮಗಳನ್ನು ರೂಪಿಸಿದರೂ ಈ ಸಾಮಾಜಿಕ ಪಿಡುಗು ದೂರವಾಗಿಲ್ಲ.

ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿಯರ ಪ್ರಮಾಣ ಅಧಿಕ ಪ್ರಮಾಣದಲ್ಲಿರುವುದು ಆತಂಕಕಾರಿ ವಿಚಾರವಾಗಿದೆ. ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿ ಪ್ರಕರಣಗಳನ್ನು ಕಡಿಮೆಗೊಳಿಸಲು ಸಿಎಂ ಸಿದ್ದರಾಮಯ್ಯ ಕೂಡ ಎರಡು ದಿನಗಳ ಕಾಲ‌ ನಡೆದ ಡಿಸಿಗಳು ಹಾಗೂ ಸಿಇಒಗಳ ಸಭೆಯಲ್ಲಿ ಸ್ಪಷ್ಟ ನಿರ್ದೇಶನಗಳನ್ನು ನೀಡಿದ್ದಾರೆ.

ರಾಜ್ಯದಲ್ಲಿ ನಡೆದ ಬಾಲ್ಯ ವಿವಾಹ 700: 2024-25ರ ಸಾಲಿನಲ್ಲಿ ರಾಜ್ಯದಲ್ಲಿ ಒಟ್ಟು 700 ಬಾಲ್ಯ ವಿವಾಹಗಳು ನಡೆದಿವೆ. ಒಟ್ಟು 3,049 ಬಾಲ್ಯ ವಿವಾಹ ದೂರುಗಳು ಸ್ವೀಕೃತವಾಗಿವೆ. ಈ ಪೈಕಿ 2,349 ಬಾಲ್ಯ ವಿವಾಹವನ್ನು ತಡೆಯಲಾಗಿದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಬಾಲ್ಯ ವಿವಾಹ ನಡೆಯುತ್ತಿರುವುದು ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಿನ ವಿಚಾರವಾಗಿದೆ. ಎರಡು ದಿನ ಸಿಎಂ ನೇತೃತ್ವದಲ್ಲಿ ನಡೆದ ಡಿಸಿ ಹಾಗೂ ಸಿಇಒಗಳ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ 2024-25ರಲ್ಲಿ 700 ಬಾಲ್ಯ ವಿವಾಹಗಳು ನಡೆದಿವೆ.

ಇದರಲ್ಲಿ, ಶಿವಮೊಗ್ಗದಲ್ಲಿ ಅತೀ ಹೆಚ್ಚು 79 ಬಾಲ್ಯ ವಿವಾಹಗಳು ನಡೆದಿವೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತವರು ಜಿಲ್ಲೆ ಬೆಳಗಾವಿಯಲ್ಲಿ 78 ಬಾಲ್ಯ ವಿವಾಹ ನಡೆದಿದ್ದು, ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದೆ. ಚಿತ್ರದುರ್ಗದಲ್ಲಿ 74 ಬಾಲ್ಯ ವಿವಾಹ ನಡೆದರೆ, ಬಾಗಲಕೋಟೆ ಜಿಲ್ಲೆಯಲ್ಲಿ 60, ಸಿಎಂ ತವರು ಜಿಲ್ಲೆ ಮೈಸೂರಿನಲ್ಲಿ 60, ಮಂಡ್ಯದಲ್ಲಿ 57 ಹಾಗೂ ಹಾವೇರಿ ಜಿಲ್ಲೆಯಲ್ಲಿ 42 ಬಾಲ್ಯ ವಿವಾಹಗಳು ನಡೆದಿವೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ