ಬೆಂಗಳೂರು: ವನ್ಯಜೀವಿ, ಅರಣ್ಯ ಸಂರಕ್ಷಣೆ ಮತ್ತು ಸಂವರ್ಧನೆಗೆ ಈಗ ಅನಿಲ್ ಕುಂಬ್ಳೆ ಬಲ ದೊರೆತಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಇಂದು ತಮ್ಮನ್ನು ಭೇಟಿ ಮಾಡಿದ ಖ್ಯಾತ ಮಾಜಿ ಕ್ರಿಕೆಟಿಗ ಹಾಗೂ ಪರಿಸರ ಪ್ರೇಮಿ ಅನಿಲ್ ಕುಂಬ್ಳೆ ಅವರೊಂದಿಗೆ ಸಚಿವರು ಸಮಾಲೋಚಿಸಿದರು. ವನ್ಯಜೀವಿ, ಅರಣ್ಯ, ಪರಿಸರದ ಬಗ್ಗೆ ಅಪಾರ ಕಾಳಜಿ ಮತ್ತು ಪ್ರೀತಿ ಹೊಂದಿರುವ ಅನಿಲ್ ಕುಂಬ್ಳೆ ಅವರು ಯಾವುದೇ ಸಂಭಾವನೆ ಇಲ್ಲದೆ ಅರಣ್ಯ, ವನ್ಯಜೀವಿ ರಾಯಭಾರಿ ಆಗಲು ಸಮ್ಮತಿಸಿದ್ದಾರೆ. ಇದು ಅವರ ಪರಿಸರ ಕಾಳಜಿ, ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಸಚಿವರು ಶ್ಲಾಘಿಸಿದರು.
ತಮ್ಮ ಲೆಗ್ ಸ್ಪಿನ್ ಮೋಡಿಯಿಂದ ಭಾರತ ತಂಡದ ಹಲವು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿರುವ ಕುಂಬ್ಳೆ ಅವರು ಕರ್ನಾಟಕದ ಅಷ್ಟೇ ಅಲ್ಲ ಭಾರತದ ಹೆಮ್ಮೆಯ ಪುತ್ರರಾಗಿದ್ದಾರೆ. ಜಿಮ್ ಲೇಕರ್ ಬಳಿಕ ಟೆಸ್ಟ್ ಪಂದ್ಯದ ಒಂದು ಇನ್ನಿಂಗ್ಸ್ನಲ್ಲಿ ಎಲ್ಲ 10 ವಿಕೆಟ್ ಪಡೆದ ಸಾಧನೆ ಮಾಡಿದ ಮಾಂತ್ರಿಕ ಬೌಲರ್ ಎಂದು ಹೊಗಳಿದರು.
110 ಟೆಸ್ಟ್ ಪಂದ್ಯಗಳನ್ನು ಆಡಿ 619 ವಿಕೆಟ್ ಪಡೆದಿರುವ ಅನಿಲ್ ಕುಂಬ್ಳೆ ಅವರು ಜಂಬೂ ಎಂದೂ ಖ್ಯಾತರಾಗಿದ್ದಾರೆ. ಅದೇ ರೀತಿ 264ಕ್ಕೂ ಅಧಿಕ ಏಕದಿನ ಪಂದ್ಯ ಆಡಿರುವ ಅವರು 337 ವಿಕೆಟ್ ಕಬಳಿಸಿದ್ದಾರೆ. ಕ್ರಿಕೆಟ್ ಪ್ರಿಯರ ಹೃದಯದಲ್ಲಿ ನೆಲೆಸಿದ್ದಾರೆ. ಇವರು ಅರಣ್ಯ, ವನ್ಯಜೀವಿ ಸಂರಕ್ಷಣೆಯ ಬಗ್ಗೆ ಪ್ರಚಾರ, ಪ್ರಸಾರ ಮಾಡಲಿದ್ದು, ಜನರಲ್ಲಿ ಜಾಗೃತಿ ಮೂಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವವೂ ಕುಂಬ್ಳೆ ಅವರಿಗಿದೆ. ಅನಿಲ್ ಕುಂಭ್ಳೆ ಅವರು ರಾಯಭಾರಿ ಆಗುತ್ತಿರುವುದು ಅರಣ್ಯ ಸಂರಕ್ಷಣೆ ಮತ್ತು ಅರಣ್ಯ ಸಂವರ್ಧನೆಗೆ ಬಲ ನೀಡಲಿದೆ ಎಂದು ಈಶ್ವರ ಖಂಡ್ರೆ ಅಭಿಪ್ರಾಯಪಟ್ಟರು.
Laxmi News 24×7