Breaking News

ಸಿಎಂ ಹುದ್ದೆ ಖಾಲಿ ಇಲ್ಲ, ಪಕ್ಷದಲ್ಲಿ ಅದರ ಚರ್ಚೆಯೇ ಇಲ್ಲ: C.M.

Spread the love

ನವದೆಹಲಿ/ಬೆಂಗಳೂರು : “ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಯೇ ಇಲ್ಲ” ಎಂದು ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ.

ದೆಹಲಿ ಭೇಟಿಯಲ್ಲಿರುವ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ, “ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಹೇಳಿದ್ದಾರೆ. ಹೀಗಾಗಿ, ಈ ಕುರಿತ ಚರ್ಚೆಯೇ ಇಲ್ಲ. ಹೈಕಮಾಂಡ್ ಯಾವುದೇ ನಿರ್ಧಾರ ತೆಗೆದುಕೊಂಡರೂ, ನಾವಿಬ್ಬರೂ ಅದನ್ನು ಪಾಲಿಸುತ್ತೇವೆ. ಬದ್ಧರಾಗಿದ್ದೇವೆ” ಎಂದು ನಾಯಕತ್ವ ಬದಲಾವಣೆಯನ್ನು ನಿರಾಕರಿಸಿದರು.

ಕರ್ನಾಟಕದ ಎಐಸಿಸಿ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಶಾಸಕರೊಂದಿಗೆ ಸರಣಿ ಮಾತುಕತೆ ನಡೆಸುವುದರ ಉದ್ದೇಶವೇನು ಎಂಬ ಪ್ರಶ್ನೆಗೆ, “ಇದನ್ನು ಅವರಿಗೇ (ಸುರ್ಜೇವಾಲಾ) ಕೇಳಿ. ನಾಯಕತ್ವ ಬದಲಾವಣೆಯ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಸುರ್ಜೇವಾಲಾ ಅವರೇ ಸ್ಪಷ್ಟವಾಗಿ ಹೇಳಿದ್ದಾರೆ. ಇದರಲ್ಲಿ ಯಾವುದೇ ಊಹಾಪೋಹಗಳು ಬೇಕಿಲ್ಲ. ಇದೆಲ್ಲವೂ ಮಾಧ್ಯಮಗಳಲ್ಲಿ ಮಾತ್ರ ಚರ್ಚಿಸಲಾಗುತ್ತಿದೆ. ಪಕ್ಷದ ಮಟ್ಟದಲ್ಲಿ ಇಂತಹ ಯಾವುದೇ ಚರ್ಚೆ ನಡೆದಿಲ್ಲ” ಎಂದರು.

“ಇಂದು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಸಮಯಾವಾಕಾಶ ಕೇಳಿದ್ದೇನೆ. ಇಲ್ಲಿಯವರೆಗೆ ಯಾವುದೇ ಮಾಹಿತಿ ಇಲ್ಲ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಡಿಕೆ ಶಿವಕುಮಾರ್​ ಹೇಳಿದ್ದೇನು?: 5 ವರ್ಷಗಳ ಸಿಎಂ ಅವಧಿಯ ಮಧ್ಯಭಾಗದಲ್ಲಿ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಿ ಈಗಿನ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರಿಗೆ ಸಾರಥ್ಯ ನೀಡಲಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಪದೇ ಪದೆ ಕೇಳಿಬರುತ್ತಿತ್ತು.

ಸ್ವತಃ ಡಿಕೆ ಶಿವಕುಮಾರ್​ ಅವರೇ ಈ ಕುರಿತು ಸ್ಪಷ್ಟನೆ ನೀಡಿದ್ದು, “ರಾಜ್ಯದಲ್ಲಿ ಯಾವುದೇ ನಾಯಕತ್ವ ಬದಲಾವಣೆ ಇಲ್ಲ. ಸದ್ಯ ಸಿಎಂ ಹುದ್ದೆ ಖಾಲಿ ಇಲ್ಲ. ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಎಂದು ಹೇಳಿದ್ದಾರೆ. ಹೀಗಾಗಿ, ನಾನು ಅವರಿಗೆ ಬೆಂಬಲ ನೀಡಲೇಬೇಕು” ಎಂದಿದ್ದರು.

“ಅಲ್ಲದೇ, ಪಕ್ಷದಲ್ಲಿ ನನಗೆ ಯಾರ ಬೆಂಬಲವೂ ಬೇಡ. ಶಾಸಕರು ಮುಂದಿನ ವಿಧಾನಸಭಾ ಚುನಾವಣೆಗಳಲ್ಲಿ ಮತ್ತೆ ಗೆಲುವು ಸಾಧಿಸುವಂತೆ ನೋಡಿಕೊಳ್ಳುವುದು ನನ್ನ ಆದ್ಯತೆಯಾಗಿದೆ” ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪದಚ್ಯುತಗೊಳಿಸಿ ಸಂಭಾವ್ಯ ನಾಯಕತ್ವ ಬದಲಾವಣೆಯ ಕುರಿತಾದ ಊಹಾಪೋಹಗಳಿಗೆ ಅಂತ್ಯ ಹಾಡಲು ಪ್ರಯತ್ನಿಸಿದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಪಕ್ಷದ ಶಾಸಕರೊಂದಿಗೆ ನಡೆಸಿದ ಸಭೆ ನಾಯಕತ್ವ ಬದಲಾವಣೆಯ ಕುರಿತಾಗಿ ಅಲ್ಲ ಎಂದು ಹೇಳಿದ್ದ ಉಪಮುಖ್ಯಮಂತ್ರಿ, ಕಾಂಗ್ರೆಸ್‌ನಲ್ಲಿ ಯಾವುದೇ ಗುಂಪುಗಳಿಲ್ಲ. ಎಲ್ಲರೂ ಒಗ್ಗಟ್ಟಾಗಿದ್ದಾರೆ. ಬದಲಿಗೆ ರಾಜ್ಯದಲ್ಲಿ ಮುಂಬರುವ ಚುನಾವಣೆಗಳ ಮೇಲೆ ಪಕ್ಷವು ಗಮನಹರಿಸುತ್ತದೆ ಎಂದು ಎಂದಿದ್ದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ