ಬೆಂಗಳೂರು : ಕರ್ನಾಟಕ – ಗೋವಾ ಗಡಿಭಾಗದಲ್ಲಿ ಹಾದು ಹೋಗುವ ಬೆಳಗಾವಿ-ಗೋವಾ ರಾಷ್ಟ್ರೀಯ ಹೆದ್ದಾರಿ-748ರಲ್ಲಿ ಖಾನಾಪುರ ತಾಲೂಕಿನ ಗಣೇಬೈಲ್ ಟೋಲ್ ನಾಕಾದಲ್ಲಿ ಅಕ್ರಮವಾಗಿ ಟೋಲ್ ಸಂಗ್ರಹ ಮಾಡುತ್ತಿರುವುದನ್ನು ವಿರೋಧಿಸಿ ಸಲ್ಲಿಸಲಾದ ಅರ್ಜಿ ಕುರಿತು ಹೈಕೋರ್ಟ್ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಈ ವಿಚಾರವಾಗಿ ಸ್ಥಳೀಯ ಗ್ರಾಮಸ್ಥರಾದ ಕೃಷ್ಣಾಜಿ ಪಾಟೀಲ್ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ. ಎಂ ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ.
ಅಲ್ಲದೆ, ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಬೆಳಗಾವಿ ಜಿಲ್ಲಾಡಳಿತಕ್ಕೆ ನೋಟಿಸ್ ಜಾರಿಗೊಳಿಸಿ, ಆಕ್ಷೇಪಣೆಗಳನ್ನು ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ನವೆಂಬರ್ 3ಕ್ಕೆ ಮುಂದೂಡಿದೆ.
ಗೋವಾ ರಾಜ್ಯಕ್ಕೆ ಸಂಪರ್ಕಿಸುವ ಖಾನಾಪುರ-ಬೆಳಗಾವಿ ನಡುವೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೈಗೊಂಡಿರುವ ಹೆದ್ದಾರಿ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿಲ್ಲ. ದೇಸೂರು ಗ್ರಾಮ ದಾಟಿ ಖಾನಾಪುರದ ಕಡೆಗೆ ಪ್ರಯಾಣ ಮಾಡುವಾಗ ಗಣೇಬೈಲ್ ಟೋಲ್ ನಾಕಾಗೆ 10 ಕಿ.ಮೀ. ಅಂತರ ಇದೆ.
ಇಲ್ಲಿ ಕಾಮಗಾರಿ ಪೂರ್ಣಗೊಂಡಿಲ್ಲ. ಹಲಗಾ ಬಸ್ತವಾಡ ಗ್ರಾಮದ ರೈತರ ಪ್ರತಿಭಟನೆಯಿಂದ ಕಳೆದ ನಾಲ್ಕೈದು ವರ್ಷಗಳಿಂದ ಕಾಮಗಾರಿ ಸ್ಥಗಿತಗೊಂಡಿದೆ. ಆದರೂ, ಗಣೇಬೈಲ್ ಟೋಲ್ ನಾಕಾದಲ್ಲಿ ಅಕ್ರಮವಾಗಿ ಟೋಲ್ ಸಂಗ್ರಹ ಮಾಡಲಾಗುತ್ತಿದೆ. ಈ ಬಗ್ಗೆ ಕೇಂದ್ರ ಸರ್ಕಾರದ ಹೆದ್ದಾರಿ ಸಚಿವಾಲಯ ಮತ್ತು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರೂ, ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಗಣೇಬೈಲ್ ಟೋಲ್ ನಾಕಾದಲ್ಲಿ ಟೋಲ್ ಸಂಗ್ರಹ ಮಾಡದಂತೆ ಕೇಂದ್ರ ಹೆದ್ದಾರಿ ಸಚಿವಾಲಯ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
Laxmi News 24×7