ಮೈಸೂರು: ರಾಜ್ಯದಲ್ಲಿ ಶೇ.83ರಷ್ಟು ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದು, ಸಣ್ಣ ವೃತ್ತಿಯಲ್ಲಿ ತೊಡಗಿರುವ 91 ವರ್ಗದ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ. ಡೀಸೆಲ್, ಪೆಟ್ರೋಲ್ ಮೇಲೆ 50 ಪೈಸೆ ಸೆಸ್ ಹೆಚ್ಚಿಸಿ ಅದನ್ನು ಕಾರ್ಮಿಕರ ಕಲ್ಯಾಣಕ್ಕೆ ನೀಡುವ ಚಿಂತನೆ ಇದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು.
ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪಂಚಾಯತ್, ಮೈಸೂರು ಇವರ ಸಹಯೋಗದಲ್ಲಿ ಬುಧವಾರ ಮೈಸೂರು ಜಿಲ್ಲೆಯ ವಿವಿಧ ಸಂಘಟಿತ ಕಾರ್ಮಿಕರಿಗೆ ‘ಸ್ಮಾರ್ಟ್ ಕಾರ್ಡ್’ ವಿತರಣೆ ಮತ್ತು ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಗುತ್ತಿದೆ. ಅಂಬೇಡ್ಕರ್ ಸಹಾಯಹಸ್ತ ಯೋಜನೆಯಡಿ 25.55 ಲಕ್ಷ ಕಾರ್ಮಿಕರು ನೋಂದಣಿ ಆಗಿದ್ದಾರೆ. ಸಾರಿಗೆ ವಲಯದಲ್ಲಿ 10.55 ಲಕ್ಷ ಕಾರ್ಮಿಕರು ನೋಂದಣಿ ಆಗಿದ್ದಾರೆ. ಪತ್ರಿಕಾ ವಿತರಕರ ವರ್ಗದಲ್ಲಿ 7 ಸಾವಿರ ಅಸಂಘಟಿತ ಕಾರ್ಮಿಕರು ನೋಂದಣಿ ಆಗಿದ್ದಾರೆ ಎಂದು ತಿಳಿಸಿದರು.
ಸಾರಿಗೆ ವಲಯದಲ್ಲಿ ಅಪಘಾತದಿಂದ ಮರಣ ಹೊಂದಿದರೆ 5 ಲಕ್ಷ ಅಪಘಾತ ವಿಮೆ ನೀಡಲಾಗುತ್ತದೆ. ಇತರೆ ವರ್ಗದ ಕಾರ್ಮಿಕರು ಅಪಘಾತವಾಗಿ ಮರಣ ಹೊಂದಿದರೆ 1 ಲಕ್ಷ ಅಪಘಾತ ವಿಮೆ, ಶಾಶ್ವತ ಅಂಗವಿಕಲತೆ ಉಂಟಾದರೆ 1 ಲಕ್ಷ , ಆಸ್ಪತ್ರೆ ವೆಚ್ಚ ಮರುಪಾವತಿ 50 ಸಾವಿರ, ಸಹಜ ಸಾವು ಸಂಭವಿಸಿದರೆ 10 ಸಾವಿರ ರೂ ನೀಡಲಾಗುತ್ತದೆ ಎಂದರು.
ದೇಶದಲ್ಲಿ ತಲಾ ಆದಾಯದಲ್ಲಿ ಕರ್ನಾಟಕವೇ ಮೊದಲ ಸ್ಥಾನದಲ್ಲಿದೆ. ಜಿಎಸ್ಟಿ ಸಂಗ್ರಹದಲ್ಲೂ ಮುಂಚೂಣಿಯಲ್ಲಿದ್ದೇವೆ. ಇದಕ್ಕೆ ಗ್ಯಾರಂಟಿ ಯೋಜನೆಗಳ ಯಶಸ್ಸು ಕಾರಣ. ಆಶಾ ದೀಪ ಕಾರ್ಯಕ್ರಮದಲ್ಲಿ ಎಸ್ಸಿ/ಎಸ್‌ಟಿ ವರ್ಗದವರಿಗೆ ಕೆಲಸ ನೀಡುವವರಿಗೆ ರೂ. 7500 ವರೆಗೆ ನೆರವು ನೀಡಲಾಗುತ್ತಿದೆ. ಹೊರಗುತ್ತಿಗೆ ನೌಕರರು ಸೊಸೈಟಿ ಮೂಲಕ ಕಾರ್ಯ ನಿರ್ವಹಿಸಲಿದ್ದು, ಸಂಬಳ ಸಮಸ್ಯೆ ತಪ್ಪಲಿದೆ. ಮುಂದಿನ ದಿನಗಳಲ್ಲಿ ಮನೆ ಕೆಲಸ ಕಾರ್ಮಿಕರಿಗೆ ಕನಿಷ್ಟ ವೇತನ ಕಾನೂನು ಜಾರಿಗೆ ತರಲಾಗುವುದು ಎಂದು ಹೇಳಿದರು.
ಚಾಮರಾಜ ಕ್ಷೇತ್ರದ ಶಾಸಕ ಕೆ.ಹರೀಶ್ ಗೌಡ ಮಾತನಾಡಿ, “ಚಾಮರಾಜ ಕ್ಷೇತ್ರದಲ್ಲಿ 60 ಸಾವಿರ ಅಸಂಘಟಿತ ಕಾರ್ಮಿಕರಿದ್ದಾರೆ. ಸರ್ಕಾರದ ಯೋಜನೆಗಳ ಕುರಿತು ರಾಜ್ಯವ್ಯಾಪಿ ಪ್ರಚಾರ ನಡೆಸಬೇಕಿದೆ” ಎಂದರು.
“ಅಸಂಘಟಿತ ವರ್ಗದ ಕಾರ್ಮಿಕರಲ್ಲಿ ಖಾಸಗಿ ವಾಣಿಜ್ಯ ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರು ಸುಮಾರು 40 ಲಕ್ಷ ಇರುವುದಾಗಿ ಅಂದಾಜಿಸಲಾಗಿದ್ದು, ಅವರಿಗೆ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ, ಕರ್ನಾಟಕ ರಾಜ್ಯ ಸರ್ಕಾರವು ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಅಧಿನಿಯಮವನ್ನು ಜಾರಿಗೆ ತಂದಿದೆ” ಎಂದು ಹೇಳಿದರು.
ನರಸಿಂಹರಾಜ ಶಾಸಕ ತನ್ವೀರ್ ಸೇಠ್ ಮಾತನಾಡಿ, “ಪ್ರತಿಯೊಬ್ಬ ಶ್ರಮಜೀವಿ ಕಾರ್ಮಿಕ ಇಲಾಖೆಯ ಅಧೀನದಲ್ಲಿ ಬರುತ್ತಾರೆ. ಕೆಲಸ ಮಾಡುವಂತಹ ಪ್ರತಿಯೊಬ್ಬ ಅವರ ವೇತನ ಹೆಚ್ಚು ಕಡಿಮೆ ಇದ್ದರೂ ಕೂಡ ಶ್ರಮ ವಹಿಸುವವರು ಕಾರ್ಮಿಕ ಇಲಾಖೆಯ ವ್ಯಾಪ್ತಿಗೆ ಬರುತ್ತಾರೆ. ಅದು ಬಹುಶಃ ವೇತನ ಎನ್ನುವುದು ಉನ್ನತ ಹುದ್ದೆಯಿಂದ ಹಿಡಿದು ಕಟ್ಟ ಕಡೆಯ ಮನುಷ್ಯನವರೆಗೂ ಪ್ರತಿಯೊಬ್ಬ ಶ್ರಮಜೀವಿ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಲ್ಲಿ ಬರುವಂಥದ್ದು” ಎಂದು ಹೇಳಿದರು.
Laxmi News 24×7